Mysore
32
scattered clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪಿಯುಸಿ ಪರೀಕ್ಷೆ-1 ಅನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸದರಿ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 14,187 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 1096 ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.

27 ಪರೀಕ್ಷಾ ಕೇಂದ್ರಗಳು:
27 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಸಮಯದಲ್ಲಿ ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ಜೆರಾಕ್ಸ್ ಹಾಗೂ ಸೈಬರ್ ಕೇಂದ್ರಗಳನ್ನು ಮುಚ್ಚಲಾಗುವುದು. ಜಿಲ್ಲಾ ಖಜಾನೆಯಿಂದ ಪ್ರಶ್ನಾ ಪತ್ರಿಕೆಯನ್ನು ತ್ರಿಸದಸ್ಯ ಸಮಿತಿಯಿಂದ ದೂರದ ಪರೀಕ್ಷಾ ಕೇಂದ್ರಗಳಾದ ಕೆ.ಆರ್ ಪೇಟೆ, ನಾಗಮಂಗಲ, ಪಾಂಡವಪುರಕ್ಕೆ ಮುಂಚಿತವಾಗಿ ತಲುಪಿಸಲಾಗುತ್ತದೆ. ಪ್ರಶ್ನಾ ಪತ್ರಿಕೆಯನ್ನು ಸಾಗಿಸುವಾಗ ಬಿಗಿ ಭದ್ರತೆಯನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ರೂಟ್ ಅಧಿಕಾರಿಗಳ ನೇಮಕ:
ಪ್ರಶ್ನಾ ಪತ್ರಿಕೆ ಸಾಗುವ ಮಾರ್ಗದಲ್ಲಿ ರೂಟ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನಾ ಪತ್ರಿಕೆ ಸಾಗಿಸುವ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್. ಅಳವಡಿಸಿರಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ನಡೆಯಲಿದ್ದು, 10 ಜನ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಸಿಸಿಟಿವಿ ಕಣ್ಗಾವಲು:
ದ್ವಿತೀಯ ಪಿಯುಸಿ ಪರೀಕ್ಷೆ ಸಿಸಿ ಟಿವಿ ಕಣ್ಗಾವಲಿನಲ್ಲಿ ನಡೆಯಲಿದ್ದು, ಒಟ್ಟು 580ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಪರೀಕ್ಷಾ ಕೊಠಡಿಗಳಿಗೆ ಈಗಾಗಲೇ ಅಳವಡಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಸಿಸಿ ಟಿವಿ ಕಡ್ಡಾಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪರೀಕ್ಷೆ ಸಮಯದಲ್ಲಿ ಸಿಸಿ ಟಿವಿಗಳಲ್ಲಿ ತಾಂತ್ರಿಕ ದೋಷ ಉಂಟಾಗುತ್ತದಂತೆ ಕ್ರಮ ವಹಿಸಬೇಕು. ಪರೀಕ್ಷೆ ನಡೆಯುವ ಸಮಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ
ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಹಾಗೂ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರದ ಜತೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ, ಪೊಲೀಸ್ ಬಂದೋಬಸ್ತ್ ಹಾಗೂ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ಗ್ರಾಮೀಣ ಭಾಗದಿಂದ ಮಕ್ಕಳು ಬರುವುದರಿಂದ ಬಸ್‌ಗಳು ಪರೀಕ್ಷಾ ದಿನದಂದು ವಿಳಂಬವಾಗದಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಹೇಳಿದರು.

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸ್ಮಾರ್ಟ್ ಡಿವೈಸ್‌ಗಳನ್ನು ಕೊಠಡಿಗೆ ತರಲು ಬೀಡಬೇಡಿ. ಪರೀಕ್ಷೆ ಮೇಲ್ವಿಚಾರಣೆಗೆ ನೇಮಿಸಿರುವ ಶಿಕ್ಷಕರು ಮಾರ್ಗಸೂಚಿಗೆ ಬದ್ಧರಾಗಿ ಕರ್ತವ್ಯ ಪಾಲಿಸಬೇಕು. ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಚಿತ್ರೀಕರಣ ಮಾಡಲು ಯಾರಿಗೂ ಅನುಮತಿ ನೀಡಬಾರದು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ. ಚಲುವಯ್ಯ, ತಹಸಿಲ್ದಾರ್‌ಗಳಾದ ವಿಶ್ವನಾಥ್, ಆದರ್ಶ್, ಅಶೋಕ್, ಚೇತನ ಯಾದವ್, ನಗರಾಭಿವೃದ್ಧಿ ಕೋಶಾಧಿಕಾರಿ ನರಸಿಂಹಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಭಾಗವಹಿಸಿದ್ದರು.

Tags:
error: Content is protected !!