ಮಂಡ್ಯ : ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯನ್ನು ವಿಸ್ತರಣೆ ಮಾಡಿ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗೆಯೇ ಗ್ರಾಮ ಪಂಚಾಯಿತಿಗಳ ಅಧೀನದಲ್ಲಿರುವ ಹೊಸ ಬಡಾವಣೆಗಳನ್ನು ಸೇರಿಸಿಕೊಂಡು ಮಂಡ್ಯ ನಗರಸಭೆಯನ್ನು ಮಹಾನಗರ ಪಾಲಿಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಪಿ.ರವಿಕುಮಾರ್‌ಗೌಡ ಗಣಿಗ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಸಭೆ ವ್ಯಾಪ್ತಿ ವಿಸ್ತರಣೆ ಬಗ್ಗೆ ಹಿಂದಿನಿಂದಲೂ ಚರ್ಚೆಗಳು ನಡೆಯುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಜಿಲ್ಲಾ ಯೋಜನಾ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಿ ಚರ್ಚೆಸಿರುವುದು ಗಮನಕ್ಕೆ ಬಂದಿದೆ. ಈ ವಿಚಾರವಾಗಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಽಕಾರಿಗಳೊಂದಿಗೆ ಸಮಾಲೋಚಿಸಲಾಗುವುದು ಎಂದು ಹೇಳಿದರು.
ಮಂಡ್ಯ ನಗರಸಭೆಯ ವ್ಯಾಪ್ತಿ ದೊಡ್ಡದಾದರೆ ಅಥವಾ ನಗರಸಭೆಯು ಮಹಾನಗರಪಾಲಿಕೆಯಾಗಿ ಮೇಲ್ದರ್ಜೆಗೇರಿದರೆ ಅಭಿವೃದ್ಧಿ ದೃಷ್ಟಿಯಿಂದಲೂ ಅನುಕೂಲವಾಗಲಿದೆ. ಈ ವಿಚಾರವಾಗಿ ಈಗಾಗಲೇ ಹೊಸ ಬಡಾವಣೆಗಳ ನಿವಾಸಿಗಳಿಂದ ಮನವಿಗಳೂ ಬಂದಿವೆ. ಹೀಗಾಗಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ಸೂಕ್ತ ತೀರ್ಮಾನದೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.





