ಮಂಡ್ಯ: ಬುಧವಾರ ಬೆಳಿಗ್ಗೆ ಬೆಂಗಳೂರಿನ ಸದಾಶಿವನಗರದ ಮನೆಯಿಂದ ಹೊರಟ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರ ಮಧ್ಯಾಹ್ನದ ವೇಳೆಗೆ ಹುಟ್ಟೂರಾದ ಮದ್ದೂರಿನ ಸೋಮನಹಳ್ಳಿ ತಲುಪಿತು.
ಇಲ್ಲಿ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಮುಖಂಡರು, ಕಾರ್ಯಕರ್ತರು, ಸಂಘ-ಸಂಸ್ಥೆ, ಸಂಘಟನೆ ಪದಾಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕ ಅಂತಿಮ ದರ್ಶನ ಪಡೆದರು.
ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸಿಎಂ ಸಿದ್ದರಾಮಯ್ಯ, ಸಚಿವರು, ಶಾಸಕರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಸ್ವಾಮೀಜಿಗಳು ಭಾಗಿಯಾಗಿ ಅಂತಿಮ ದರ್ಶನ ಪಡೆದರು. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾಡಳಿತ ಹಾಗೂ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಪೊಲೀಸ್ ಇಲಾಖೆಯೂ ಕ್ರಮಗಳನ್ನು ಕೈಗೊಂಡಿತ್ತು.
ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸರ್ಕಾರದ ವತಿಯಿಂದ ಸಕಲ ಸರ್ಕಾರಿ ಗೌರವ ಸಿದ್ಧತೆಗಳನ್ನು ನಡೆಸಲಾಗಿದ್ದು, ಮೃತರ ಚಿತೆಗೆ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ ಹೆಗಡೆ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಲಿದ್ದಾರೆ.
ಎಸ್.ಎಂ.ಕೃಷ್ಣ ಅವರು ಮಂಗಳವಾರ ಬೆಳಗಿನ ಜಾವ ಸುಮಾರು 2.30 ಗಂಟೆಗೆ ನಿಧನರಾಗಿದ್ದು, ಇಂದು(ಡಿ.11) ಅವರ ಹುಟ್ಟೂರಾಗಿರುವ ಸೋಮನಹಳ್ಳಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಕ್ರಿಯೆ ನಡೆಯಲಿದೆ. ಅಲ್ಲದೇ ಮೃತರ ಅಂತ್ಯ ಸಂಸ್ಕಾರವನ್ನು ಒಕ್ಕಲಿಗ ಸಂಪ್ರದಾಯದಂತೆ ಮಾಡಲಾಗುತ್ತಿದ್ದು, ಸುಮಾರು 1,000 ಕೆ.ಜಿ.ಯಷ್ಟು ಶ್ರೀಗಂಧದ ಕಟ್ಟಿಗೆಗಳನ್ನು ಅರಣ್ಯ ಇಲಾಖೆಯಿಂದ ಪೂರೈಕೆ ಮಾಡಲಾಗಿದೆ. ಬಳಿಕ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ವಿಧಿ-ವಿಧಾನಗಳನ್ನು ನೆರವೇರಿಸಲಿದ್ದಾರೆ.





