ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಾಡಾನೆಗಳು ದಾಂಧಲೆ ನಡೆಸಿದ್ದು, ಅಪಾರ ಪ್ರಮಾಣದ ಕಬ್ಬನ್ನು ನಾಶಪಡಿಸಿವೆ.
ಮಂಡ್ಯದ ಶ್ರೀರಾಮನಗರದ ಬಳಿಯಿರುವ ಕಬ್ಬಿನ ಗದ್ದೆಗೆ ಲಗ್ಗೆಯಿಟ್ಟಿದ್ದ ಕಾಡಾನೆಗಳು ಕಬ್ಬಿನ ಗದ್ದೆಯನ್ನು ತುಳಿದು ನಾಶಪಡಿಸಿವೆ.
ಈಗಾಗಲೇ ಮದ್ದೂರು, ಮಳವಳ್ಳಿ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಭಾರೀ ಆತಂಕಕ್ಕೆ ಸಿಲುಕಿದ್ದಾರೆ.
ಈಗ ಮಂಡ್ಯದಲ್ಲೂ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿಕಾರಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸ ಪಟ್ಟುಆನೆಗಳನ್ನು ಕಾಡಿಗೆ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು, ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒತ್ತಾಯ ಮಾಡಿದ್ದಾರೆ.