ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಹೇಳಿದರು.
ಬೂದನೂರು ಉತ್ಸವ 2026ರ ಹಿನ್ನೆಲೆಯಲ್ಲಿ ಹೊಸ ಬೂದನೂರು ಗ್ರಾಮದ ಶ್ರೀ ಕಾಶಿ ವಿಶ್ವನಾಥ ಮತ್ತು ಅನಂತಪದ್ಮನಾಭ ಆವರಣದಲ್ಲಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೂದನೂರಿನಲ್ಲಿ 12ನೇ ಶತಮಾನದಲ್ಲಿ ಕಾಶಿನಾಥೇಶ್ವರ ದೇವಾಲಯ ನಿರ್ಮಾಣವಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಲೆ ಮತ್ತು ಸಂಸ್ಕೃತಿಯನ್ನು ಜನರಿಗೆ ಪರಿಚಯಿಸಲು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಮತ್ತು ಬೋಧಕರ ಜೊತೆ ಸಮಾಲೋಚನೆ ನಡೆಸಿ ಮಕ್ಕಳಿಗೆ ಅರಿವು ಮತ್ತು ಜ್ಞಾನವನ್ನು ಬೆಳೆಸಿಕೊಳ್ಳುವಂತೆ ಮಾರ್ಗದರ್ಶನ ನೀಡಬೇಕು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸುವಂತೆ ಆತ್ಮಸ್ಥೈರ್ಯ ತುಂಬಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ, ಮನ್ ಮುಲ್ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.



