Mysore
20
clear sky

Social Media

ಬುಧವಾರ, 28 ಜನವರಿ 2026
Light
Dark

ಮದ್ದೂರು ತಾಲ್ಲೂಕಿನಲ್ಲಿ ಅಭಿವೃದ್ಧಿಯ ಪರ್ವ : 1146.76 ಕೋಟಿ ರೂ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಸಜ್ಜಾದ ವೇದಿಕೆ

ಮದ್ದೂರು: ತಾಲ್ಲೂಕಿನಲ್ಲಿ ಅಭಿವೃದ್ಧಿಯ ಪರ್ವ, 1146.76 ಕೋಟಿ ರೂ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ವೇದಿಕೆ ಸಜ್ಜಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.28ರಂದು ಮದ್ದೂರಿನಲ್ಲಿ ಚಾಲನೆ ನೀಡಲಿದ್ದಾರೆ.

ತಾಲ್ಲೂಕಿನಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಕಾರ್ಯಕ್ರಮಕ್ಕೆ ವಿಶೇಷ ವೇದಿಕೆ ಸಿದ್ಧವಾಗಿದೆ. ಶಿವಪುರ ಸತ್ಯಾಗ್ರಹ ಸೌಧದ ವಿನ್ಯಾಸದೊಂದಿಗೆ ವೇದಿಕೆಯ ಮುಂಭಾಗ ಆಕರ್ಷಿತವಾಗಿ ಸಿದ್ಧಗೊಂಡಿದೆ.
ಕಾರ್ಯಕ್ರಮ ಕುರಿತಂತೆ ಶಾಸಕ ಕೆ.ಎಂ.ಉದಯ್ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳು ವಸ್ತುಪ್ರದರ್ಶನ ಮಳಿಗೆಯನ್ನು ತೆರೆಯಲಾಗುವುದು. ಸರ್ಕಾರವು ಅಭಿವೃದ್ಧಿಗೆ ಆದ್ಯತೆ ನೀಡಿದೆ ಎಂಬುದಕ್ಕೆ ಜು.28ರಂದು ನಡೆಯಲಿರುವ ಕಾರ್ಯಕ್ರಮ ಸಾಕ್ಷಿಯಾಗಲಿದೆ ಎಂದರು.

ರೈತರಿಗೆ ಹೆಚ್ಚು ಅನುಕೂಲವಾಗುವಂತೆ ನಾಲೆ ಹಾಗೂ ಕೆರೆಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಮಗಾರಿಗಳು ಹಾಗೂ ರಸ್ತೆ, ಚರಂಡಿ, ಕುಡಿಯುವ ನೀರಿಗೆ ಸಂಬಂಧಿಸಿದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸರ್ಕಾರದೊಂದಿಗೆ ಅಭಿವೃದ್ಧಿ ಕೆಲಸಗಳಲ್ಲಿ ಕೈ ಜೋಡಿಸಬೇಕು. ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಲು 500 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಾತನಾಡಿ, 16 ಇಲಾಖೆಗಳ ಒಟ್ಟು 87 ಕಾಮಗಾರಿಗಳ ಪೈಕಿ 60 ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ 27 ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಲಿದೆ. ಎಲ್ಲಾ ಕಾಮಗಾರಿಗಳ ಒಟ್ಟು ಮೊತ್ತ 1146.79 ಕೋಟಿ ರೂ.ಗಳಾಗಿರುತ್ತದೆ ಎಂದರು.

ಜಿಲ್ಲಾ ಪೊಲೀಸ್ ಅಧಿಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ, ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಆಗಮಿಸುವ ವಾಹನಗಳನ್ನು ನಿಲುಗಡೆ ಮಾಡಲು ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸೂಕ್ತ ಬಂದೋಬಸ್ತ್ ವ್ಯವಸ್ಥೆಗಾಗಿ 1000 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಮಾತನಾಡಿ, ಕಾರ್ಯಕ್ರಮದ ದಿನದಂದು ಜೀತ ವಿಮುಕ್ತ 85 ಜನರಿಗೆ ನನ್ನ ಗುರುತು ಅಭಿಯಾನದಡಿ 14 ದಾಖಲೆಗಳನ್ನು ನೀಡಲಾಗುವುದು. ಸಾರಥಿ ಯೋಜನೆಯಡಿ ಇಬ್ಬರಿಗೆ ಕಾರು ಖರೀದಿಸಲು ಸಹಾಯಧನ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್‌ಕುಮಾರ್, ಉಪಾಧ್ಯಕ್ಷ ಟಿ. ಆರ್.ಪ್ರಸನ್ನಕುಮಾರ್, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಉಪವಿಭಾಗಾಽಕಾರಿ ಶಿವಮೂರ್ತಿ, ತಹಸಿಲ್ದಾರ್ ಪರುಶುರಾಮ್ ಸತ್ತಿಗೆರಿ, ತಾಪಂ ಇಒ ರಾಮಲಿಂಗಯ್ಯ, ಇಂಜಿನಿಯರ್‌ಗಳಾದ ನಾಗರಾಜು, ದೇವಾನಂದ, ಸಿಪಿಐಗಳಾದ ವೆಂಕಟೇಗೌಡ, ಶಿವಕುಮಾರ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮದ್ದೂರಿನಲ್ಲಿ ಜು.28ರಂದು ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ವೇದಿಕೆ ಸಿದ್ಧತೆಯನ್ನು ಶಾಸಕ ಕೆ.ಎಂ.ಉದಯ್, ಜಿಲ್ಲಾಧಿಕಾರಿ ಡಾ.ಕುಮಾರ, ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ಅವರುಗಳು ಪರಿಶೀಲಿಸಿದರು.

Tags:
error: Content is protected !!