ಮಂಡ್ಯ: ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಆತ್ಮಹತ್ಯೆಯನ್ನು ನಿಲ್ಲಿಸಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿಯೇ ನಾವು ಐದು ಗ್ಯಾರಂಟಿಯನ್ನು ಕೊಟ್ಟಿದ್ದೇವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ ಆತ್ಮಹತ್ಯೆ ಪ್ರಕರಣಗಳು ಮುಂದುವರೆಯುತ್ತಿವೆ. ಯಾವ ಕಾರಣಕ್ಕಾಗಿ ಆತ್ಮಹತ್ಯೆ ಆಗುತ್ತಿವೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರಿಂದ ಒಂದು ತಂಡ ರಚಿಸಿ ತನಿಖೆ ಮಾಡಿಸಿದ್ದೇವೆ ಎಂದು ಹೇಳಿದರು.
ಇನ್ನು ಸಿಎಂ ಸಿದ್ದರಾಮಯ್ಯ ಖಾಸಗಿ ಸಂಸ್ಥೆಯಿಂದ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ಪ್ರಸ್ತುತ ರೈತ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಕಡಿಮೆ ಆಗಿದೆ. ಆದರೆ ಕಡಿಮೆ ಆಗಿರೋದು ಖುಷಿ ತಂದಿಲ್ಲ. ಆದರೆ ರೈತರ ಆತ್ಮಹತ್ಯೆ ಸಂಪೂರ್ಣವಾಗಿ ನಿಲ್ಲಬೇಕು ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ರಸಗೊಬ್ಬರ ಕಳುಹಿಸುವುದು ಕೇಂದ್ರ ಸರ್ಕಾರ ರಸಗೊಬ್ಬರ ತಯಾರಿಕೆ ಮಾಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ. ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್‌ಗೆ ಇದರ ಕುರಿತಾಗಿ ಸಾಮಾನ್ಯ ಜ್ಞಾನ ಇಲ್ಲ. ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ನೀಡಬೇಕಿದ್ದ 1.25 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರವನ್ನು ಕೇಂದ್ರ ನೀಡಿಲ್ಲ. ಇದರಿಂದ ಸಣ್ಣ ಪ್ರಮಾಣದಲ್ಲಿ ರಸಗೊಬ್ಬರ ವಿತರಣೆಯಲ್ಲಿ ವಿಳಂಬವಾಗಿದೆ ಅಷ್ಟೇ ಎಂದರು.





