ಮಂಡ್ಯ: ಫೈನಾನ್ಸ್ ಕಿರುಕುಳಕ್ಕೆ ನೊಂದ ತಾಯಿ ಆತ್ಮಹತ್ಯೆಗೆ ಶರಣಗಾಗಿದ್ದ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದ ಮಗನೂ ಸಾವಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರಿನಲ್ಲಿ ನಡೆದಿದೆ.
31 ವರ್ಷದ ರಂಜಿತ್ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ರಂಜಿತ್ ತಾಯಿ ಪ್ರೇಮಾ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ಬೇಸತ್ತು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು.
ಇದರಿಂದ ತೀವ್ರವಾಗಿ ನೊಂದಿದ್ದ ರಂಜಿತ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 2-3 ದಿನಗಳ ಹಿಂದೆಯೇ ರಂಜಿತ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಂದು ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.