Mysore
28
overcast clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಶಾಲಾ-ಕಾಲೇಜು ತಂಬಾಕು ಮುಕ್ತದ ಗುರಿ ; ಜಿಲ್ಲಾಧಿಕಾರಿ ಕುಮಾರ

ಮಂಡ್ಯ: ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ವಲಯವಾಗಿಸಿ ದೃಢೀಕರಣ ಪತ್ರ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು.

ಇಂದು (ಮಾ.13) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ 4ನೇ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಸರ್ಕಾರಿ ಕಚೇರಿಗಳನ್ನು ಸಹ ತಂಬಾಕು ಮುಕ್ತವಾಗಿಸಿ ದೃಢೀಕರಣ ಪತ್ರ ನೀಡಬೇಕು ಎಂದು ಹೇಳಿದರು.

ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ ಕನಿಷ್ಠ 100 ಶಾಲೆಗಳಲ್ಲಿ ತಂಬಾಕು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಗುರಿಯನ್ನು ಹೊಂದಲಾಗಿತ್ತು, ಪ್ರಸ್ತುತ ಜಿಲ್ಲೆಯಲ್ಲಿ 15000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನೊಳಗೊಂಡಂತೆ 302 ಕ್ಕೂ ಹೆಚ್ಚು ತಂಬಾಕು ಜಾಗೃತಿ ಕಾರ್ಯಕ್ರಮಗಳು ಜರುಗಿವೆ ಎಂದು ತಿಳಿಸಿದರು.

ಅಕ್ರಮವಾಗಿ ತಂಬಾಕು ಮಾರಾಟ ಮಾಡುತ್ತಿದ್ದ 118 ಕಡೆ ದಾಳಿ ನಡೆಸಿ 1,48,120 ರೂ ಮೊತ್ತವನ್ನು ವಿಧಿಸಲಾಗಿದೆ, ನಗರ ಮಟ್ಟದಲ್ಲಿ ನೂತನ ತಂಬಾಕು ಮಾರಾಟಗಾರರಿಗೆ ಪರವಾನಿಗೆ ನಿಯಮಗಳ ಮಾಹಿತಿಯನ್ನು ನಗರಾಭಿವೃದ್ಧಿ ಇಲಾಖೆ ವತಿಯಿಂದ ನೀಡಲಾಗುವುದು ಎಂದು ತಿಳಿಸಿದರು.

ಶಾಲಾ ಮಟ್ಟದಲ್ಲಿ ಮಕ್ಕಳಿಂದ ಪೋಷಕರಿಗಾಗಿ ತಂಬಾಕು ಕುರಿತು ಜಾಗೃತಿ ಮೂಡಿಸುವ ಪತ್ರಗಳನ್ನು ಬೆರೆಸಿ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ, ಪ್ರಾಥಮಿಕ ಆರೋಗ್ಯ ಕೇಂದ್ರ ಪದವಿ ಪೂರ್ವ ಕಾಲೇಜುಗಳಲ್ಲಿ ತಂಬಾಕು ನಿಯಂತ್ರಣದ ಕುರಿತು ಫಲಕಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮೋಹನ್, ನಗರಾಭಿವೃದ್ಧಿ ಕೋಶಾಧಿಕಾರಿ ಮಾಯಣ್ಣಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಶಿವರಾಮೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಚೆಲುವಯ್ಯ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!