ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಆರ್ಥಿಕ ಅಶಿಸ್ತು ಹಾಗೂ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ ಎಂದು ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಡಾ.ಮೀರಾ ಶಿವಲಿಂಗಯ್ಯ ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಆರ್ಥಿಕ ಅಶಿಸ್ತು ಹಾಗೂ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಇದು ಎಲ್ಲರಿಗೂ ಬೇಸರವಾಗಿದೆ. ಇದನ್ನು ಸರ್ಕಾರದ ಗಮನಕ್ಕೂ ಕೂಡ ತಂದಿದ್ದೇವೆ. ಕಳೆದ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಸಂಭ್ರಮದಿಂದ ಆಚರಿಸಿದ್ದೇವೆ. ಏನೂ ಕಾರಣ ಕೊಡದೇ ಸಾಹಿತ್ಯ ಪರಿಷತ್ತಿನ ಎಲ್ಲಾ ಜಿಲ್ಲಾ ಕಾರ್ಯಕಾರಿ ಮಂಡಳಿ ಸದಸ್ಯರನ್ನು ವಜಾಗೊಳಿಸಿದ್ದು, ಮನಸ್ಸಿಗೆ ನೋವು ತಂದಿದೆ. ಅವರ ಮೇಲಿರುವ ಆರ್ಥಿಕ ಅಶಿಸ್ತಿನ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಿದ್ದೇವು.
ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ ಸರಿಯಾದ ದಿಕ್ಕಿನಲ್ಲಿ ವಿಚಾರಣೆ ನಡೆಸಲು ಆದೇಶಿಸಿದೆ. ಜೊತೆಗೆ ಬೈಲಾಗಳ ತಿದ್ದುಪಡಿಗಳಲ್ಲೂ ಕೂಡ ರಾಜ್ಯಾದ್ಯಂತ ಹೋರಾಟ ಮಾಡಿದ್ದೇವೆ. ಬೈಲಾದಲ್ಲಿ ಮಹೇಶ್ ಜೋಶಿ ಅವರು ಸರ್ವಾಧಿಕಾರಿ ಧೋರಣೆ ತೋರುತ್ತಿದ್ದರು. ಉಳಿಕೆಯಾದ ದುಡ್ಡನ್ನು ಆಯಾಯ ಜಿಲ್ಲೆಗಳಲ್ಲಿ ಕನ್ನಡ ಭವನ ಮಾಡುವ ಬದಲು ನಮಗೆ ಕೊಡಬೇಕು ಎಂದು ಬೈಲಾ ತಿದ್ದುಪಡಿ ತಂದಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಅವರ ವಿರುದ್ಧ ವಿಚಾರಣೆ ನಡೆಸಲು ಅನುಮತಿ ನೀಡಿರುವುದು ಸರಿಯಾದ ಕ್ರಮ ಎಂದರು.





