ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಭಾರೀ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 124 ಅಡಿಗಳಾಗಿದೆ. ಜಲಾಶಯದ ಇಂದಿನ ಒಳಹರಿವು 1.20 ಲಕ್ಷ ಕ್ಯೂಸೆಕ್ಸ್‌ಗಳಿದ್ದು, ಜಲಾಶಯದ ಇಂದಿನ ಹೊರಹರಿವನ್ನು 1.30 ಲಕ್ಷ ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ.
ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾವೇರಿ ನದಿಗೆ ನೀರನ್ನು ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರಿಗೆ ಪ್ರವಾಹ ಭೀತಿ ಎದುರಾಗಿದ್ದು, ನದಿಯ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.
ಜಲಾಶಯಕ್ಕೆ ಒಳಹರಿವು ಹೆಚ್ಚಾದರೆ ಹೊರಹರಿವನ್ನು ಇನ್ನೂ ಕೂಡ ಹೆಚ್ಚಳ ಮಾಡಲಾಗುತ್ತದೆ. ಆದ್ದರಿಂದ ಕಾವೇರಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಒಂದು ಕಡೆ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿ ರೈತರ ಮೊಗದಲ್ಲಿ ಮಂದಹಾಸ ತರಿಸಿದೆ. ಆದರೆ ಈಗ ಕಾವೇರಿ ನದಿ ಪಾತ್ರದಲ್ಲಿ ಭಾರೀ ಪ್ರವಾಹ ಉಂಟಾಗಿ ಜನತೆಯಲ್ಲಿ ಭಯ ಹುಟ್ಟಿಸಿದ್ದು, ಕಾವೇರಿಯ ರೌದ್ರಾವತಾರ ಕಡಿಮೆಯಾಗಲಿ ಎಂದು ಜನತೆ ದೇವರ ಮೊರೆ ಹೋಗಿದ್ದಾರೆ.





