ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗಿದೆ.
ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪರಿಣಾಮ ಹಾರಂಗಿ ಜಲಾಶಯದಿಂದ ಹೆಚ್ಚಿನ ನೀರನ್ನು ನದಿಗೆ ಬಿಡಲಾಗಿದೆ. ಈ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಕೂಡ ಭರ್ತಿಯಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಜಲಾಶಯದ ಒಳಹರಿವು 35,000 ಕ್ಯೂಸೆಕ್ಸ್‌ಗೆ ಏರಿಕೆಯಾಗಿದ್ದು, ಹೊರಹರಿವನ್ನು 2957 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ. ಇದೀಗ 109 ಅಡಿಯಷ್ಟು ಕೆಆರ್‌ಎಸ್ ಜಲಾಶಯ ಭರ್ತಿಯಾಗಿದೆ.
ಜಲಾಶಯಕ್ಕೆ ಒಳಹರಿವು ಹೆಚ್ಚಾದಂತೆ ಹೊರಹರಿವನ್ನೂ ಹೆಚ್ಚಳ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಕಾವೇರಿ ನದಿಗೆ ಹೆಚ್ಚಿನ ನೀರನ್ನು ಬಿಡಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.





