ಮಂಡ್ಯ: ಜಿಲ್ಲೆಯಲ್ಲಿನ ಶಾಲಾ, ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿರುವ ಅಂಗಡಿಗಳಲ್ಲಿ ತಂಬಾಕು ಮಾರಾಟ ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ದಂಡ ವಿಧಿಸಿ. ಯಾವುದೇ ದಾಕ್ಷಿಣ್ಯ ತೋರದೆ ಅಂಗಡಿಗಳ ಪರವಾನಗಿ ರದ್ದು ಪಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದ್ದಾರೆ.
ಗುರುವಾರ (ಜು.4) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಸಮನ್ವಯ ಸಭೆ ನಡೆಸಿ ಮಾತನಾಡಿದ ಅವರು, ಕೆಲವು ಶಾಲೆಯ ಸುತ್ತಮುತ್ತ ತಂಬಾಕು ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿದೆ. ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ತಮ್ಮ ಶಾಲೆಯ ಸುತ್ತಮುತ್ತಲು 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟವಾಗುತ್ತಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದರು.
ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಇದರ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಜಿಲ್ಲೆಯನ್ನು ತಂಬಾಕು ಮುಕ್ತ ವಲಯವನ್ನಾಗಿ ಮಾಡಬೇಕು ಎಂದು ಹೇಳಿದರು.
ತಂಬಾಕು ಮಾರಾಟ ಮಾಡುವವರು ಇನ್ನೂ ಮುಂದೆ ನಗರ ಸಭೆ/ಪುರಸಭೆ/ಪಟ್ಟಣ ಪಂಚಾಯತಿಗಳಲ್ಲಿ ತಂಬಾಕು ಮಾರಾಟ ರಹದಾರಿ ಪಡೆಯಬೇಕಿರುತ್ತದೆ. ಇದಕ್ಕೆ ನಗರ ಸ್ಥಳೀಯ ಸಂಸ್ಥೆಗಳು ಸಮಿತಿ ರಚಿಸಿಕೊಂಡು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ 2023 ರ ಏಪ್ರಿಲ್ ಮಾಹೆಯಿಂದ ಮಾರ್ಚ್ 2024 ರ ವರೆಗೆ ಮಂಡ್ಯ ಜಿಲ್ಲೆಯಲ್ಲಿ ಒಟ್ಟು 88 ಕಡೆ ಕೋಟ್ಪಾ ದಾಳಿ ನಡೆಸಿ ರೂ 1,34,860 ಹಣ ದಂಡ ವಿಧಿಸಿದೆ. 1031 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚಿದೆ. ಸಾರ್ವಜನಿಕರು ನಾಯಿ ಕಡಿತಕ್ಕೆ ಒಳಗಾದ ತಕ್ಷಣ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಿ ಇಲ್ಲವಾದಲ್ಲಿ ರೇಬಿಸ್ (rabies) ಗೆ ತಿರುಗಿ ಸಾವು ಸಂಭವಿಸಬಹುದು ಎಂದರು.
ನಗರ ಸಭೆ/ಪುರಸಭೆ/ಪಟ್ಟಣ ಪಂಚಾಯಿತಿ/ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆಯನ್ನು ಕೈಗೊಳ್ಳಬೇಕು. ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಮಾಂಸ ಮಾರಾಟ ಮಾಡುವ ಅಂಗಡಿಗಳಲ್ಲಿನ ತ್ಯಾಜ್ಯಗಳನ್ನು ಸೂಕ್ತವಾಗಿ ವಿಲೇವಾರಿ ಮಾಡುವಂತೆ ಸೂಕ್ತ ಕ್ರಮ ವಹಿಸಿ ಎಂದು ತಿಳಿಸಿದರು.
ಸಾಕು ಪ್ರಾಣಿಗಳನ್ನು ಸಾಕುವ ಕುಟುಂಬದವರಿಗೆ ರೇಬಿಸ್ ಕಾಯಿಲೆ ಬಗ್ಗೆ ಅರಿವು ಮೂಡಿಸಿ. ನಾಯಿ ಕಚ್ಚಿದ ನಂತರ ಚಿಕಿತ್ಸೆ ಪಡೆಯದಿದ್ದರೆ ಸಾವು ಖಚಿತ ಎಂಬ ಬೋರ್ಡ್ ಅನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ ಮೋಹನ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಆರ್.ಸಿ.ಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಮ್.ಎನ್ ಆಶಾಲತಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಸ್ ರಾಜಮೂರ್ತಿ, ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕ ಸಿ.ಚೆಲುವಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.