ಮಂಡ್ಯ : ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಗುಣವುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ಕಾನೂನುಬಾಹಿರವಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪಿಸಿ ಗೌರಿ-ಗಣೇಶ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣಪತಿ ಹಬ್ಬ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಅಲ್ಲದೆ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ ಎಂದರು.
ಪಿ.ಒ.ಪಿ. ಗಣಪತಿಮೂರ್ತಿ ಮಾರಾಟ ಮಾಡುವುದು ಕೂಡ ಕಾನೂನುಬಾಹಿರವಾಗಿದ್ದು, ಅಧಿಕಾರಿಗಳು ಸಾಗಾಣಿಕೆ ತಡೆಗಟ್ಟಲು ಚೆಕ್ ಪೋಸ್ಟ್ ಬಳಿ ಹಾಗೂ ಮಾರಾಟ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವವರು ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಇದಕ್ಕಾಗಿ ಏಕ ಗವಾಕ್ಷಿ ಕೇಂದ್ರ ತೆರೆಯಲಾಗುವುದು. ಅನುಮತಿ ನೀಡುವ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯವರು, ವಿದ್ಯುತ್ ಇಲಾಖೆ ಅವರು ವಿದ್ಯುತ್ ಕಂಬಗಳಿಂದ ಯಾವುದೇ ಅವಘಡ ಆಗದಂತೆ ಪರಿಶೀಲಿಸಿದ ನಂತರ ಅನುಮತಿ ನೀಡಬೇಕು ಎಂದರು.
ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳ ಸಮಿತಿ ರಚಿಸಿ ಜವಾಬ್ದಾರಿಗಳೊಂದಿಗೆ ಆದೇಶ ಹೊರಡಿಸಲಾಗುವುದು. ತಾಲ್ಲೂಕು ಮಟ್ಟದಲ್ಲಿ ಸಭೆ ನಡೆಸಿ ಪಿ.ಒ.ಪಿ. ಗಣಪತಿ ಮಾರಾಟ ಹಾಗೂ ಪ್ರತಿಷ್ಠಾಪನೆಯಾಗದಂತೆ ನಿಗಾ ವಹಿಸಬೇಕು ಎಂದರು.
ನೀರಿನ ಮೂಲಗಳಾದ ನದಿ, ತೊರೆ, ಹಳ್ಳ, ಕೆರೆ, ಬಾವಿ, ಇವುಗಳ ನೀರು ಮಾಲಿನ್ಯವಾಗದಂತೆ ಸಂರಕ್ಷಿಸುವ ಉದ್ದೇಶದಿಂದ ಭಾರ ಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡ ಯಾವುದೇ ರೀತಿಯ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ.) ನಿಂದ ತಯಾರಿಸಿದ ಗಣೇಶ ವಿಗ್ರಹಗಳು ಹಾಗೂ ಇತರೆ ವಿಗ್ರಹಗಳ ಉತ್ಪಾದನೆ, ಮಾರಾಟ ಹಾಗೂ ಅವುಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ಸಂಪೂರ್ಣವಾಗಿ ನಿಷೇಽಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪಿಸುವವರಿಂದ ಗಣಪತಿ ವಿಸರ್ಜನೆ ಮಾಡುವ ಸ್ಥಳದ ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದರು.
ಪ್ಲಾಸ್ಟರ್ ಅಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ ೧೯೭೪ರ ಪ್ರಕಾರ ಕಲಂ ೩೩(ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಅಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಉಚ್ಚನ್ಯಾಯಾಲಯ ಹೊರಡಿಸಿರುವ ಹಾಗೂ ಸರ್ಕಾರದ ಆದೇಶಗಳನ್ನು ಉಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಗೀತಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ನರಸಿಂಹಮೂರ್ತಿ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲ, ನಗರಸಭೆ ಪೌರಾಯುಕ್ತರಾದ ಪಂಪಾಶ್ರೀ, ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.





