Mysore
28
clear sky

Social Media

ಶನಿವಾರ, 31 ಜನವರಿ 2026
Light
Dark

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದ್ದು, ಅದರ ಸವಿ ನೆನಪಿಗಾಗಿ 5.50 ಕೋಟಿ ರೂ. ವೆಚ್ಚದಲ್ಲಿ ಕನ್ನಡ ನಾಡನ್ನು ಆಳಿದ ಗಂಗ ರಾಜವಂಶದ ದೊರೆ ಶ್ರೀ ಪುರುಷನ ಹೆಸರಿನಲ್ಲಿ ಮುಂದಿನ ಒಂದು ವರ್ಷದಲ್ಲಿ ಕನ್ನಡ ಭವನವನ್ನು ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ನಗರದ ಸರ್ ಎಂ.ವಿ.ವಿಶ್ವೇಶ್ವರಯ್ಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ನೂತನ ಕನ್ನಡ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಕಲೆ, ಸಾಹಿತ್ಯ, ಕೃಷಿ ಮತ್ತು ಸಾಂಸ್ಕೃತಿಕ ಕ್ಷೇತ್ರ ಹಾಗೂ ಹಲವು ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದೆ. ಬಿ.ಎಂ.ಶ್ರೀಕಂಠಯ್ಯ, ಪು.ತಿ.ನ., ಕೆ.ಎಸ್.ನರಸಿಂಹಸ್ವಾಮಿ ಹೀಗೆ ಅನೇಕ ಸಾಹಿತ್ಯ ದಿಗ್ಗಜರು ಕನ್ನಡ ಸಾಹಿತ್ಯ ಕ್ಷೇತ್ರವನ್ನು ಸಮೃದ್ಧಗೊಳಿಸಿದ್ದಾರೆ. ಶ್ರೀಮಂತಗೊಂಡಿರುವ ಭಾಷೆಯ ಮತ್ತಷ್ಟು ಬಲವರ್ಧನೆಗೆ ಕನ್ನಡ ಭವನ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಭವನ ನಿರ್ಮಾಣಕ್ಕೆ ತಲಾ 1 ಕೋಟಿ ರೂ. ಅನುದಾನ ನೀಡಿರುವ ಶಾಸಕರಾದ ಪಿ.ರವಿಕುಮಾರ್ ಗಣಿಗ, ದರ್ಶನ್ ಪುಟ್ಟಣ್ಣಯ್ಯ, ರಮೇಶ್ ಬಾಬು ಬಂಡಿಸಿದ್ದೇಗೌಡ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಚಿವರು, ಮಂಡ್ಯ ಜಿಲ್ಲೆಯವರೆಂದು ಹೇಳಿಕೊಳ್ಳಲು ನಮಗೆ ತೃಪ್ತಿ ಹಾಗೂ ಸಂತಸ ವ್ಯಕ್ತವಾಗುತ್ತದೆ ಎಂದು ತಿಳಿಸಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ದೇಶ-ವಿದೇಶಗಳ ಕನ್ನಡಿಗರ ಸಾಕ್ಷಿ ಪ್ರಜ್ಞೆಯಾಗಿ ಜರುಗಿದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪಿಗಾಗಿ ಕನ್ನಡ ಭವನ ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಪಿ.ರವಿಕುಮಾರ್ ಗಣಿಗ ಮಾತನಾಡಿ, 10 ಲಕ್ಷ ಜನರ ಉಪಸ್ಥಿತಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆದು ಇತಿಹಾಸ ನಿರ್ಮಿಸಿದೆ. ಆ ನೆನಪಿನ ಹೆಜ್ಜೆ ಗುರುತಿಗೆ ಬೃಹತ್ ಕನ್ನಡ ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿದೆ ಎಂದರು.

ಕಾರ್ಯಕ್ರಮದ ಸಾನ್ನಿಧ್ಯವನ್ನು ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಹಿಸಿದ್ದರು. ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ.ಶೋಭಾರಾಣಿ, ಕಸಾಪ ಸಂಚಾಲಕರಾದ ಡಾ. ಮೀರಾ ಶಿವಲಿಂಗಯ್ಯ, ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷಿ ರಘುನಂದನ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ನಾಗೇಶ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ರುದ್ರಪ್ಪ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ತಹಸಿಲ್ದಾರ್ ವಿಶ್ವನಾಥ್, ನಗರಸಭೆ ಪೌರಾಯುಕ್ತರಾದ ಯು.ಪಿ.ಪಂಪಾಶ್ರೀ, ಕರ್ನಾಟಕ ಸಂಘದ ಅಧ್ಯಕ್ಷ ಡಾ.ಬಿ.ಜಯಪ್ರಕಾಶಗೌಡ, ಕಸಾಪ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Tags:
error: Content is protected !!