ಮಂಡ್ಯ: ಕೇಂದ್ರ ಸರ್ಕಾರ ತೆರಿಗೆ ಹಣ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದ್ರೋಹವೆಸಗಿ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿಯಲ್ಲಿ ಇಂದು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ಚಾಲನೆ ನೀಡಿದ ನಂತರ ಮಾತನಾಡಿದ ಅವರು ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ತೆರಿಗೆ ಹಣ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದ್ದರೂ ಬಿಜೆಪಿ ಮತ್ತು ಜೆಡಿಎಸ್ ಸಂಸದರು ಯಾರಾದರೂ ಸರಿಯೇ ಕೇಂದ್ರದ ವಿರುದ್ಧ ಬಾಯಿ ಬಿಡಲ್ಲ. ಅಲ್ಲದೇ ಕೇಂದ್ರ ಸರ್ಕಾರ ಮೇಕೆದಾಟು, ಮಹಾದಾಯಿ ಯೋಜನೆ ಹಾಗೂ ತುಂಗಭದ್ರಾ ಮೇಲ್ದಂಡೆ ಯೋಜನೆಗಳಿಗೆ ಕ್ಲೀಯರೆನ್ಸ್ ನೀಡದೆ ಅನುದಾನವನ್ನು ಹಿಡಿದಿಟ್ಟುಕೊಂಡರೂ ಸಹ ಸಂಸತ್ ಅಧಿವೇಶನದ ಸಂದರ್ಭದಲ್ಲಿ ಕರ್ನಾಟಕದ ಸಂಸದರು ಮೌನವಾಗಿರುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
ರಾಜ್ಯಗಳ ಅಭಿವೃದ್ಧಿ ವಿಚಾರಕ್ಕೆ ಬಂದರೆ ಕರ್ನಾಟಕಕ್ಕಿಂತ ಹಿಂದಿರುವ ಉತ್ತರ ಭಾರತದ ಅನೇಕ ರಾಜ್ಯಗಳಿಗೆ ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಅಧಿಕ ಅನುದಾನವನ್ನು ಬಿಡುಗಡೆ ಮಾಡುತ್ತದೆ ಎಂದು ಆರೋಪಿಸಿದ್ದಾರೆ.
ಭಾರತದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಸಂದಾಯ ಮಾಡುವ ಸಾಲಿನಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ಆದರೆ ಕೇಂದ್ರ ಸರ್ಕಾರ ಪ್ರತಿಬಾರಿಯೂ ನಮ್ಮ ರಾಜ್ಯಕ್ಕೆ ಮಲತಾಯಿ ಧೋರಣೆ ತೋರಿದೆ ಎಂದು ಹೇಳಿದರು.