Mysore
14
few clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ತಮಿಳುನಾಡಿಗೆ ಕಾವೇರಿ : ಮಂಡ್ಯದಲ್ಲಿ ತಲೆಮೇಲೆ ಕಲ್ಲು ಹೊತ್ತು ಪ್ರತಿಭಟನೆ

ಮಂಡ್ಯ : ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸೇನೆ ಕಾರ್ಯಕರ್ತರು ತಲೆ ಮೇಲೆ ಕಲ್ಲು ಹೊತ್ತು ಮಂಡ್ಯ ನಗರದಲ್ಲಿ ಭಾನುವಾರ ಪ್ರತಿಭಟಿಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ತಲೆ ಮೇಲೆ ಕಲ್ಲು ಹೊತ್ತು ಧರಣಿ ನಡೆಸಿದ ಸೇನೆಯ ಕಾರ್ಯಕರ್ತರು ಕಾವೇರಿ ಹೋರಾಟಕ್ಕೆ ಇಳಿಯದ ಜಿಲ್ಲೆಯ ಶಾಸಕರು ಮತ್ತು ಸಂಸದರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದರು.

ಮಂಡ್ಯ ಜಿಲ್ಲೆಯ ಶಾಸಕರು, ಸಂಸದರು ಕಾವೇರಿ ನೀರು ಉಳಿವಿಗಾಗಿ ಬೀದಿಗಿಳಿದು ಹೋರಾಟ ಮಾಡಬೇಕು, ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು, ಈಗಾಗಲೇ ನೆರೆ ರಾಜ್ಯಕ್ಕೆ 18 ಟಿಎಂಸಿ ನೀರು ಹರಿದು ಹೋಗಿದ್ದು ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಮಂಡ್ಯ ಜಿಲ್ಲೆಗೆ 100 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು, ರೈತರ ಹಿತ ಕಡೆಗಣಿಸಿ ನೀರು ಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಮಹಾಂತಪ್ಪ, ಶಿವಾಲಿ, ನಂದೀಶ್, ಮಂಜುನಾಥ್ ಬೆಟ್ಟಳ್ಳಿ, ಅರಕೆರೆ ರಘು, ಗುತ್ತಲು ಚಂದ್ರು, ಜಯಮ್ಮ, ದರ್ಶನ್, ರಾಜೇಶ್, ನಂದೀಶ್ ಇತರರು ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!