ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಇತಿಹಾಸ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಕಾವೇರಿ ಜಲಾನಯದ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಒಂದೂವರೆ ಲಕ್ಷ ಕ್ಯೂಸೆಕ್ಸ್‌ಗೂ ಅಧಿಕ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ.
ಪರಿಣಾಮ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ಭಾರೀ ಪ್ರವಾಹ ಉಂಟಾಗಿದೆ. ಇನ್ನು ಕಾವೇರಿ ನದಿಯು ರೌದ್ರಾವತಾರ ತಾಳಿರುವ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿರುವ ಎಲ್ಲಾ ಪ್ರವಾಸಿ ತಾಣಗಳಿಗೂ ನಿರ್ಬಂಧ ವಿಧಿಸಲಾಗಿದೆ.
ಕಾವೇರಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಇತಿಹಾಸ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾದರಷ್ಟೇ ವೆಲ್ಲೆಸ್ಲಿ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸೇತುವೆ ಬಳಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.