Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕೆಆರ್‌ಎಸ್‌ ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್ಸ್‌ ನೀರು ಬಿಡುಗಡೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 1.50 ಲಕ್ಷ ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದಿಂದ ಹೊರಹರಿವನ್ನು 1.70 ಲಕ್ಷ ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 124 ಅಡಿಗಳಾಗಿದೆ.

ಸಂಪೂರ್ಣ ಭರ್ತಿಯಾಗಿರುವ ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡಲಾಗಿದ್ದು, ನದಿ ಪಾತ್ರದ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಜಲಾಶಯಕ್ಕೆ ಒಳಹರಿವು ಹೆಚ್ಚಾದಂತೆ ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ತಮ್ಮ ತಮ್ಮ ಜಾನುವಾರುಗಳನ್ನು ಸಹ ಸುರಕ್ಷಿತ ಸ್ಥಳಕ್ಕೆ ರವಾನಿಸಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇನ್ನು ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮಂಡ್ಯ ಜಿಲ್ಲೆಯಾದ್ಯಂತ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಾವೇರಿ ನದಿ ಪ್ರವಾಹಕ್ಕೆ ಸಿಲುಕಿ ಹಲವಾರು ಎಕರೆ ಜಮೀನುಗಳು ಜಲಾವೃತಗೊಂಡಿದ್ದು, ರೈತರು ಕಂಗಾಲಾಗಿದ್ದಾರೆ.

ಪ್ರವಾಹಕ್ಕೆ ಸಿಲುಕಿ ಕಂಗಾಲಾಗಿರುವ ರೈತರು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Tags: