ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯ್ ಸಿಇಒ ಶೇಖ್ ತನ್ವೀರ್ ಆಸಿಫ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಅತಿ ತುರ್ತು ಪರಿಸ್ಥಿತಿಯಲ್ಲಿರುವ ಪ್ರಯಾಣಿಕರನ್ನು ಅವಶ್ಯಕವಿದ್ದಲ್ಲಿ ಮಿಮ್ಸ್ ಗೆ ಹಾಗೂ ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಒಂದು ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಲ್ಲಿ, ಅದರ ಖರ್ಚು ವೆಚ್ಚವನ್ನು ಕೆ ಎಸ್ ಆರ್ ಟಿಸಿ ವತಿಯಿಂದ ಭರಿಸುವಂತೆ ಅವರು ನಿರ್ದೇಶನ ನೀಡಿದರು.
ಪರಿಸ್ಥಿತಿ ಅವಲೋಕಿಸಿದರೆ ಸಣ್ಣ ಪುಟ್ಟ ಗಾಯಗಳಾಗಿದ್ದು ಎರಡು-ಮೂರು ಜನರಿಗೆ ಹೆಚ್ಚು ಗಾಯಗೊಂಡಿದ್ದು, ಅವರನ್ನು ಮಿಮ್ಸ್ ಅಥವಾ ಚಿಕಿತ್ಸೆಗೆ ಉನ್ನತ ಆಸ್ಪತ್ರೆಗೆ ಪ್ರಥಮ ಆದ್ಯತೆ ಮೇಲೆ ಸ್ಥಳಾಂತರ ಗೊಳಿಸಲು ವೈದ್ಯಾಧಿಕಾರಿಗಳಿಗೆ ತಿಳಿಸಿದರು.