ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರಿನಲ್ಲಿದ್ದವರು ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಗ್ರಾಮದವರು ಎಂದು ಗುರುತಿಸಲಾಗಿದೆ. ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.