ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಎಮ್ಮೆಯ ಮೇಲೆ ದಾಳಿ ನಡೆಸಿ ತಿಂದು ಹಾಕಿರುವ ಘಟನೆ ನಡೆದಿದೆ.
ಬಿ.ಕೋಡಿಹಳ್ಳಿ ಗ್ರಾಮದ ತೋಟದ ಮನೆಯ ನಿವಾಸಿ ರೈತ ಮಹಿಳೆ ಗೌರಮ್ಮ ರಮೇಶ್ ಎಂಬವರಿಗೆ ಸೇರಿದ ಸುಮಾರು ೫೦ಸಾವಿರ ರೂ.ಬೆಲೆ ಬಾಳುವ ಹಾಲು ಕರೆಯುವ ಎಮ್ಮೆಯ ಮೇಲೆ ಭಾನುವಾರ ರಾತ್ರಿ ದಾಳಿ ನಡೆಸಿರುವ ಚಿರತೆ ಭಾಗಶಃ ತಿಂದು ಹಾಕಿದೆ.
ಕಳೆದ ನಾಲ್ಕು ತಿಂಗಳಲ್ಲಿ ಐದು ಬಾರಿ ದಾಳಿ ನಡೆಸಿರುವ ಚಿರತೆಯು ಎಮ್ಮೆ, ಹಸು, ಸಾಕು ನಾಯಿ ಸೇರಿದಂತೆ ಹಲವು ಸಾಕು ಪ್ರಾಣಿಗಳನ್ನು ತಿಂದು ಹಾಕಿದ್ದು, ಗ್ರಾಮಸ್ಥರು ಹಾಗೂ ಜಮೀನಿನಲ್ಲಿ ಕೆಲಸ ಮಾಡುವ ರೈತರು ಹಾಗೂ ದನಗಾಹಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಬಿ.ಕೋಡಿಹಳ್ಳಿ, ಅಗ್ರಹಾರಬಾಚಹಳ್ಳಿ, ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ.
ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿ ಚಿರತೆಯನ್ನು ಸೆರೆ ಹಿಡಿಯಬೇಕು, ಜನರ ಆತಂಕವನ್ನು ದೂರ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ, ಪಶು ವೈದ್ಯಕೀಯ ಸಹಾಯಕ ನಿರ್ದೇಶಕ ಡಾ.ಎಚ್.ಎಸ್.ದೇವರಾಜು, ತಾಲ್ಲೂಕು ಅರಣ್ಯ ಸಂರಕ್ಷಣಾಧಿಕಾರಿ ಅನಿತಾ, ಗ್ರಾಮ ಲೆಕ್ಕಾಧಿಕಾರಿ ಸುನಿಲ್ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.