ಕೆ.ಆರ್.ಪೇಟೆ: ವಿದ್ಯುತ್ ತಂತಿ ಸ್ಪರ್ಶಿಸಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ದೇವರಸೇಗೌಡ ಎಂಬುವವರಿಗೆ ಸೇರಿದ ಜಮೀನಿನಲ್ಲಿ ವಿದ್ಯುತ್ ಸ್ಪರ್ಶದಿಂದ ಚಿರತೆ ಸಾವಿಗೀಡಾಗಿದೆ.
ಚಿರತೆ ಮರ ಏರಲು ಪ್ರಯತ್ನಿಸಿದಾಗ ವಿದ್ಯುತ್ ಕಂಬದ ತಂತಿ ತಗುಲಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿ ಚಿರತೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಇನ್ನು ಈ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಇವುಗಳನ್ನು ತಡೆಗಟ್ಟಲು ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.
ಸಾಕು ಪ್ರಾಣಿಗಳ ಮೇಲೆ ಚಿರತೆಗಳು ಆಗಾಗ್ಗೆ ದಾಳಿ ನಡೆಸುತ್ತಿದ್ದು, ಚಿರತೆ ದಾಳಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಕಾಡು ಪ್ರಾಣಿಗಳ ಹಾವಳಿಯನ್ನು ತಡೆಗಟ್ಟಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.