ಮದ್ದೂರು: ಜನ ಸಾಮಾನ್ಯರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಬಗೆಹರಿಸಲು ಸರ್ಕಾರವು ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ಆಯೋಜಿಸುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದು ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಎಮ್.ಉದಯ್ ಹೇಳಿದರು.
ಅವರು ಇಂದು(ಜು.1) ಮದ್ದೂರು ತಾಲೂಕಿನ ಭಾರತೀನಗರ ಬಾಲಾಜಿ ಸಮುದಾಯ ಭವನದಲ್ಲಿ ನಡೆದ ಜನ ಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳಿಂದಾಗಿ ನೂರಾರು ಸಂಖ್ಯೆಯಲ್ಲಿ ಅರ್ಜಿಗಳನ್ನು ಹಿಡಿದು ನಾಡ ಕಛೇರಿ ಹಾಗೂ ತಾಲ್ಲೂಕು ಕಚೇರಿಗಳಿಗೆ ಅಲೆಯುತ್ತಿದ್ದಾರೆ. ಇದನ್ನು ತಪ್ಪಿಸುವ ಸಲುವಾಗಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹಾಗೂ ರೈತರು ಇದರ ಉಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ರೈತರಿಗೆ ಪಶು ಸಂಗೋಪನೆ, ತೋಟಗಾರಿಕೆ, ಕೃಷಿ, ರೇಷ್ಮೆ ಸೇರಿದಂತೆ ಇನ್ನಿತರೆ ಇಲಾಖೆಗಳಲ್ಲಿ ಸರ್ಕಾರ ಸೌಲಭ್ಯಗಳನ್ನು ಒದಗಿಸುತ್ತದೆ. ಅಧಿಕಾರಿಗಳು ರೈತರಿಗೆ ಮಾಹಿತಿ ನೀಡಿ ಸೌಲಭ್ಯವನ್ನು ಪಾರದರ್ಶಕವಾಗಿ ಒದಗಿಸಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಹಾಗೂ ರೈತರಿಗೆ ಕೃಷಿ ಇಲಾಖೆ ವತಿಯಿಂದ ಸವಲತ್ತು ಹಾಗೂ ಕರಪತ್ರ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಉಪ ವಿಭಾಗಾಧಿಕಾರಿ ಎಂ.ಶಿವಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೌಶಲ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.