ಮಳವಳ್ಳಿ : ಮೂರು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, 75 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಭಾನುವಾರ ಸಂಜೆ ನಡೆದಿದೆ.
ಗಾಯಗೊಂಡವರ ಪೈಕಿ 10 ಜನ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಮೈಸೂರಿಗೆ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನು ಓದಿ: ಮಕ್ಕಳಲ್ಲಿ ಸೃಜನಶೀಲತೆ ಅರಳಬೇಕು : ಕೆ.ವಿ.ಪ್ರಭಾಕರ್
ತಾಲ್ಲೂಕಿನ ಬಾಚನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊಳ್ಳೇಗಾಲ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಮಳವಳ್ಳಿ ಕಡೆಯಿಂದ ಎದುರಿಗೆ ಬರುತ್ತಿದ ಮತ್ತೊಂದು ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇದೇ ಮಾರ್ಗದಲ್ಲಿ ಬಂದ ಇನ್ನೊಂದು ಸಾರಿಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಗಾಯಾಳುಗಳನ್ನು ತಕ್ಷಣವೇ ಆಂಬ್ಯುಲನ್ಸ್ ಮೂಲಕ ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದಾರೆ. ಡಿಕ್ಕಿಯ ತೀವ್ರತೆಗೆ ಬಸ್ಸುಗಳ ಮುಂಭಾಗ ನುಜ್ಜುಗುಜ್ಜಾಗಿದೆ. ಇನ್ನು ಗಾಯಾಳುಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.





