Mysore
19
scattered clouds
Light
Dark

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ಕೇಕೆ; ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ಪ್ರಕರಣಗಳು ಹೆಚ್ಚು ವರದಿಯಾಗುವ ಸ್ಥಳಗಳನ್ನು ಗುರುತಿಸಿ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಸಮನ್ವಯವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಡೆಂಗ್ಯೂ ರೋಗ ಹರಡದಂತೆ ನಿಯಂತ್ರಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಗುರುವಾರ(ಜು.4) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಡೆಂಗ್ಯೂ ನಿಯಂತ್ರಣ ದಿನದ ಪ್ರಯುಕ್ತ ಡೆಂಗ್ಯೂ ನಿಯಂತ್ರಣ ಕುರಿತು ಅಂತರ ಇಲಾಖೆಯ ಸಮನ್ವಯ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿರುವ ಹಾಸ್ಟೆಲ್ ಗಳಿಗೆ ಮಕ್ಕಳಿಗೆ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸುವಂತೆ ತಿಳಿಸಿ. ಹಾಸ್ಟಲ್ ಗಳ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ ಜೊತೆಗೆ ಡೆಂಗ್ಯೂ ರೋಗ ನಿಯಂತ್ರಣ ಮಾಡಲು ಅಗತ್ಯ ಕ್ರಮವಹಿಸಿ ಎಂದರು.

ಜಿಲ್ಲೆಯಲ್ಲಿ 189 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಎಲ್ಲರಿಗೂ ಚಿಕಿತ್ಸೆ ಸಿಗುತ್ತಿದೆ. ಸಾರ್ವಜನಿಕರಲ್ಲಿ ಭಯ ಬೇಡ ಎಚ್ಚರಿಕೆ ಇರಲಿ. ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತದೆ. ಮನೆಯ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹಳೆಯ ಟೈರ್, ತೆಂಗಿನ ಚಿಪ್ಪುಗಳು ಮುಂತಾದ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ. ಜೊತೆಗೆ ಕುಡಿಯಲು ಶುದ್ಧ ನೀರನ್ನು ಬಳಸಿ ಎಂದು ಸಲಹೆ ನೀಡಿದರು.

ಮಳೆಗಾಲ ಪ್ರಾರಂಭವಾಗಿದ್ದು, ಸ್ಥಳೀಯ ಸಂಸ್ಥೆಗಳು ನಿಗದಿತವಾಗಿ ತಮ್ಮ ವ್ಯಾಪ್ತಿಯ ರಸ್ತೆ ಹಾಗೂ ಚರಂಡಿಗಳನ್ನು ಪರಿಶೀಲಿಸಿ, ಎಲ್ಲಿಯೂ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗದಂತೆ ನೋಡಿಕೊಳ್ಳಿ ಎಂದರು.

ಸಂಕ್ರಾಮಿಕ ರೋಗಗಳು ಹರಡದಂತೆ ತಡೆಗಟ್ಟಲು ಸಾರ್ವಜನಿಕರಿಗೆ ಶುದ್ಧ, ಸುರಕ್ಷಿತ ಕುಡಿಯುವ ನೀರನ್ನು ಪೂರೈಸುವುದು ಮುಖ್ಯ. ಸ್ಥಳೀಯ ಸಂಸ್ಥೆಗಳು ನೀರನ್ನು ಪರೀಕ್ಷಿಸಿ ವರದಿ ಪಡೆದ ತಕ್ಷಣ ಆರೋಗ್ಯ ಇಲಾಖೆಯೊಂದಿಗೆ ಹಂಚಿಕೊಂಡು ವಿಶ್ಲೇಷಣೆ ನಡೆಸಿ, ನೀರಿನಲ್ಲಿ ರೋಗವಾಹಕ ಅಂಶಗಳು ಕಂಡುಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬಹುದು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ ಮೋಹನ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಆರ್.ಸಿ.ಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಮ್.ಎನ್ ಆಶಾಲತಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಸ್ ರಾಜಮೂರ್ತಿ, ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕ ಸಿ.ಚೆಲುವಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.