ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಅವರು ಗಣೇಶ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಮದ್ದೂರಿನಲ್ಲಿ ಐಬಿ ಸರ್ಕಲ್, ಪೇಟೆ ಬೀದಿ ಕೊಲ್ಲಿ ಸರ್ಕಲ್‌ನಿಂದ ಶಿಂಷಾ ನದಿಯವರೆಗೆ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿದೆ.
ಕೇಸರಿ ಧ್ವಜ ಹಿಡಿದು ಹಿಂದೂ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲುಮುಟ್ಟಿದ್ದು, ಹಲವು ಜಾನಪದ ಕಲಾತಂಡಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿವೆ.
ಮೆರವಣಿಗೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೆಜ್ಜೆ ಹೆಜ್ಜೆಗೂ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದಾರೆ.
ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಅಶ್ವಥ್ ನಾರಾಯಣ್, ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ.





