Mysore
31
scattered clouds
Light
Dark

ಆದಿಚುಂಚನಗಿರಿ ಕ್ಷೇತ್ರ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಸಚಿವ ಎನ್‌ ಎಸ್‌ ಭೋಸರಾಜು ಭೇಟಿ

ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವ ಭರವಸೆ

ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಿರ್ಮಿಸಲಾಗುತ್ತಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿ ಪೂರ್ಣಗೊಳಿಸುವ ಹಾಗೂ ತಾರಾಲಯ ನಿರ್ಮಾಣಕ್ಕೆ ಸರಕಾರದ ವತಿಯಿಂದ ಅಗತ್ಯ ಸಹಕಾರ ನೀಡುವ ಭರವಸೆಯನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ನೀಡಿದರು.

ಇಂದು ಜಿಲ್ಲೆಯ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದು ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿಯನ್ನು ವೀಕ್ಷಿಸಿದರು.

2018-19 ನೇ ಸಾಲಿನಲ್ಲಿ ಇದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಸುಮಾರು 7 ಕೋಟಿ ರೂಪಾಯಿಗಳ ಅನುದಾನ ಕೂಡಾ ಮೀಸಲಿಡಲಾಗಿದೆ. ಈ ಕೇಂದ್ರದ ಕಟ್ಟಡವನ್ನು ಇನ್ಫಿನಿಟಿ ಆಕಾರದಲ್ಲಿ ನಿರ್ಮಿಸಲಾಗುತ್ತಿದೆ. ಪ್ರಸ್ತುತ ಕಟ್ಟಡ ಕಾಮಗಾರಿಯು ಪ್ರಗತಿಯಲ್ಲಿದೆ. ಇದನ್ನ ಚುರುಕುಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ,  ಕ್ಷೇತ್ರದಲ್ಲಿ ತಾರಾಲಯ ನಿರ್ಮಾಣದ ಬಗ್ಗೆಯೂ ಪ್ರಸ್ತಾಪಿಸಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಈ ಬಗ್ಗೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಪ್ರಸ್ತಾವನೆ ಸಲ್ಲಿಕೆಯ ನಂತರ ಇಲಾಖೆಯ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷನೆ ನಡೆಸಿದ ಸಚಿವರು, ಕ್ಷೇತ್ರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಕೈಗೊಳ್ಳಲಾಗುತ್ತಿರುವ ಉಪ ವಿಜ್ಞಾನ ಕೇಂದ್ರದ ಕಾಮಗಾರಿಗಳ ಬಗ್ಗೆ ಸಮಾಲೋಚನೆ ನಡೆಸಿದರು. ಸರಕಾರದ ವತಿಯಿಂದ ಅಗತ್ಯ ಸಹಕಾರ ದೊರೆಯಲಿದೆ ಎಂದು ಸಚಿವರು ಸ್ವಾಮೀಜಿಗಳಿಗೆ ತಿಳಿಸಿದರು.

ಮಠಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ ಪ್ರಸನ್ನನಾಥ ಸ್ವಾಮೀಜಿಗಳಿಂದ ಸಚಿವರು ಆಶೀರ್ವಾದ ಸ್ವೀಕರಿಸಿದರು.