Mysore
17
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ನನ್ನ ಹೆಜ್ಜೆ ಮಂಡ್ಯಕ್ಕಾಗಿ; ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದೇನು?

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅಭ್ಯರ್ಥಿಗಳ ದಂಡೇ ಒಂದೆಡೆ ಇದ್ದರೇ, ಒಳಬೇಗುದಿ, ಸ್ವತಂತ್ರ ಅಭ್ಯರ್ಥಿಗಳ ಆರ್ಭಟ ಜೋರು ಎನ್ನಬಹುದಾಗಿದೆ.

ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಟಾರ್‌ ಚಂದ್ರು ಕಣಕ್ಕಿಳಿದಿದ್ದಾರೆ. ಇತ್ತ ಬಿಜೆಪಿಯಿಂದ ಸುಮಲತಾ ಗೆ ಟಿಕೆಟ್‌ ನೀಡಲಾಗುತ್ತದೆ ಎಂದು ಭಾವಿಸಲಾಗಿತ್ತು. ಆದೆ ಎನ್‌ಡಿಎ ತನ್ನ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯನ್ನಾಗಿ ನೇಮಕ ಮಾಡಿದ್ದಾರೆ.

ಇನ್ನು ಮಂಡ್ಯ ಕ್ಷೇತ್ರಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ಸುಮಲತಾ ಅವರಿಗೆ ಟಿಕೆಟ್‌ ಕೈ ತಪ್ಪಿದ ಬೆನ್ನಲ್ಲೇ ಮುಂದಿನ ನಡೆ ಬಗ್ಗೆ ಚರ್ಚೆ ಮಾಡಲು ನಾಳೆ (ಏ.3) ಆಪ್ತರ ಸಭೆ ಕರೆದಿರುವ ಸುಮಲತಾ ಅವರು ತಮ್ಮ ಮುಂದಿನ ನಡೆ ಏನೆಂಬುದನ್ನು ತಿಳಿಸಲಿದ್ದಾರೆ.

ಇದರ ಬೆನ್ನಲ್ಲೇ ಇಂದು(ಏ.2) ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ನೀಡಿದ್ದಾರೆ. ತಾವು ಕೊನೆಯವರೆಗೂ ಮಂಡ್ಯಕ್ಕಾಗಿಯೇ ಹೋರಾಟ ಮಾಡಲಿದ್ದು, ಎಂದಿಗೂ ಮಂಡ್ಯದ ಜನತೆಯ ಸೇವೆಗೆ ಸಿದ್ದರಿರುವ ಬಗ್ಗೆ ಸಂದೇಶವನ್ನು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಪತಿ ಅಂಬರೀಶ್‌, ಪುತ್ರ ಅಭಿಷೇಕ್‌ ಮತ್ತು ನಟ ದರ್ಶನ್‌ ಜೊತೆಗಿನ ತಮ್ಮ ಫೋಟೋವನ್ನು ಪೋಸ್ಟ್‌ ಮಾಡಿದ್ದಾರೆ.

ಎಕ್ಸ್‌ ಖಾತೆಯಲ್ಲೇನಿದೆ?

ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.

ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ.

ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ.

ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಸುದೀರ್ಘವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

Tags:
error: Content is protected !!