ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 113 ಕೋಟಿ ರೂ.ಆರ್ಥಿಕ ನೆರವು ನೀಡುವ ಮೂಲಕ ಕಾರ್ಖಾನೆಗೆ ಶಕ್ತಿ ನೀಡಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ ತಿಳಿಸಿದರು.
ಪ್ರಸಕ್ತ ಸಾಲಿನ ಹಂಗಾಮಿಗೆ ಈಗಾಗಲೇ ಬಾಯ್ಲಿಂಗ್ ಹೌಸ್, ಬಾಯ್ಲರ್ ದುರಸ್ತಿ, ಕಾಕಂಬಿ ಟ್ಯಾಂಕ್ ನಿರ್ಮಾಣಕ್ಕೆ ಸುಮಾರು 74 ಕೋಟಿ ರೂ.ಗಳ ಅಂದಾಜು ಪಟ್ಟಿಯು ಸರ್ಕಾರದ ಅನುಮೋದನೆ ಹಂತದಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಕ್ಕರೆ ಸಚಿವ ಶಿವಾನಂದ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲ ಶಾಸಕರು ಮೈಷುಗರ್ ಕಾರ್ಖಾನೆಯನ್ನು ಸಮರ್ಥವಾಗಿ ಮುನ್ನಡೆಸಲು ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ. ಜಿಲ್ಲಾ ರೈತ ಹಿತಕ್ಷಣಾ ಸಮಿತಿಯವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದರು.
ಕಳೆದ ಎರಡು ವರ್ಷಗಳಿಂದ ಮೈಷುಗರ್ ಕಾರ್ಖಾನೆಯನ್ನು ಸ್ವಾವಲಂಬಿಯಾಗಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ನಡೆದಿದೆ. ಸ್ವಂತ ಸಾಮರ್ಥ್ಯದಿಂದ ಕೋ-ಜನ್ ಪ್ರಾರಂಭಿಸಿ 16 ಕೋಟಿ ರೂ. ವಿದ್ಯುತ್ ಉತ್ಪಾದನೆ ಮಾಡಲಾಗಿದ್ದು, ಈ ಹಿಂದೆ ನನೆಗುದಿಗೆ ಬಿದ್ದಿದ್ದ 270 ರೂ. ಕೋಟಿ ರೂ.ಗಳನ್ನು ಮೈಷುಗರ್‌ಗೆ ನೀಡಿ ಆರ್ಥಿಕವಾಗಿ ಶಕ್ತಿ ತುಂಬಲಾಗಿದೆ. 120 ಕೋಟಿ ರೂ. ಆದಾಯ ತೆರಿಗೆಯನ್ನು ಮನ್ನಾ ಮಾಡಲು ಹೋರಾಟ ಮಾಡಲಾಗಿತ್ತು. ಇದೀಗ ಅದನ್ನೂ ಮನ್ನಾ ಮಾಡಲು ಸರ್ಕಾರ ಸೂಚನೆ ನೀಡಿದೆ ಎಂದು ತಿಳಿಸಿದರು.
ರಾಜ್ಯಪಾಲರು ರಾಜೀನಾಮೆ ನೀಡಲಿ:ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್. ಚಿದಂಬರ್ ಮಾತನಾಡಿ, ಜಂಟಿ ಅಽವೇಶನದಲ್ಲಿ ರಾಜ್ಯಪಾಲರು ನಡೆದುಕೊಂಡ ರೀತಿ ಸರಿಯಲ್ಲ. ಸದನಕ್ಕೆ ಅಗೌರವದಿಂದ ನಡೆದುಕೊಂಡಿರುವ ಕಾರಣ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯಪಾಲರ ಧೋರಣೆಯನ್ನು ಖಂಡಿಸಿ ಬರುವ ಮಂಗಳವಾರ ಬೆಂಗಳೂರಿನಲ್ಲಿ ರಾಜಭವನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಮತ್ತು ಶಾಸಕರು, ಸಚಿವರ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬಹಳ ಹಗುರವಾಗಿ ಮಾತನಾಡಿದ್ದಾರೆ. ಮಂಡ್ಯ ಜಿಲ್ಲೆಗೆ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದರು.
ಮುಖಂಡರಾದ ಸಿ.ಎಂ. ದ್ಯಾವಪ್ಪ, ಸುಂಡಹಳ್ಳಿ ಮಂಜುನಾಥ್, ದೀಪಕ್, ನಾಗರಾಜು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.





