ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡದೇ ಮತಾಂಧ ಶಕ್ತಿಗಳನ್ನು ಹತ್ತಿಕ್ಕಬೇಕು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಕೆರಗೋಡು ಹನುಮ ಧ್ವಜ ತೆರವು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ನಂತರ ಈ ಸರ್ಕಾರವು ಹೇಗೆ ದೇಶ ವಿರೋಧಿ ಶಕ್ತಿಗಳಿಗೆ ರಾಜ್ಯವನ್ನು ಒತ್ತೆ ಇಟ್ಟಿದೆ ಎಂಬುದಕ್ಕೆ ಈ ಘಟನೆ ಸ್ಪಷ್ಟ ಉದಾಹರಣೆ ಎಂದು ಹೇಳಿದ್ದಾರೆ.
ಗಣೇಶ ವಿಸರ್ಜನೆ ವೇಳೆ ಮತಾಂಧರು ದೂರ್ತತನ ಪ್ರದರ್ಶಿಸಿದ್ದಾರೆ. ಗಣಪತಿ ಭಕ್ತರ ಮೇಲೆ ದುರುದ್ದೇಶಪೂರ್ವಕವಾಗಿ ದಾಳಿ ನಡೆಸಿ ಕೋಮು ದಳ್ಳುರಿ ಹೊತ್ತಿಸಿ ಜನರು, ಪೊಲೀಸರ ಮೇಲೆ ಪೂರ್ವಯೋಜಿತವಾಗಿ ದೌರ್ಜನ್ಯ ನಡೆಸಿರುವುದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎನ್ನುವುದು ಸ್ಪಷ್ಟ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕಲ್ಲುಗಳ ಸುರಿಮಳೆಗರೆದ ಪುಂಡರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರನ್ನು ಪ್ರಚೋದಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಇರುವುದರಿಂದ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರ ರಾಜಕೀಯ ಸ್ವಾರ್ಥಕ್ಕಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೇಶವಿರೋಧಿ ಶಕ್ತಿಗಳನ್ನು ಹುರಿದುಂಬಿಸಿ ಓಲೈಕೆ ರಾಜಕಾರಣ ಮಾಡುತ್ತಿರುವುದರ ನೇರ ಪರಿಣಾಮ ಇದಾಗಿದೆ. ಹಿಂದೂಗಳ ಮೇಲಿನ ಈ ದಾಳಿಗೆ ಪ್ರತಿಯಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.