ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 52 ಮಂದಿಯನ್ನು ಬಂಧಿಸಲಾಗಿದೆ.
ಘಟನೆ ಬಳಿಕ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪರಿಸ್ಥಿತಿ ಉದ್ದಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ನಾಗಮಂಗಲದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಡಾ.ಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದ್ದು, ಸೆಪ್ಟೆಂಬರ್.14ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನನು ನಿಯೋಜನೆ ಮಾಡಲಾಗಿದೆ. ಪ್ರಕರಣ ಸಂಬಂಧ ಇದುವರೆಗೂ 52 ಮಂದಿಯನ್ನು ಬಂಧಿಸಲಾಗಿದ್ದು, ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಬದರಿಕೊಪ್ಪಲಿನಲ್ಲಿ ಅದ್ಧೂರಿಯಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಯುವಕರ ನಡುವೆ ವಾಕ್ಸಮರ, ತಳ್ಳಾಟ, ನೂಕಾಟ ನಡೆಯಿತು. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿದ್ದರು.
ಮಂಡ್ಯದ ನಾಗಮಂಗಲ ಪಟ್ಟಣ ಸದ್ಯ ಉದ್ವಿಗ್ನಗೊಂಡಿದ್ದು, ದುಷ್ಕರ್ಮಿಗಳ ಗುಂಪು ಅಂಗಡಿ ಹಾಗೂ ಅಂಗಡಿ ಮುಂದಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಅಷ್ಟೇ ಅಲ್ಲದೇ ರಸ್ತೆ ಮಧ್ಯೆ ಕತ್ತಿ ಹಿಡಿದು ಝಳಪಿಸಿದ್ದ ಘಟನೆಯೂ ಕೂಡ ನಡೆದಿದೆ.