ಮಂಡ್ಯ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ( ಎಸ್‌ಸಿ, ಎಸ್‌ಟಿ) ಯೋಜನೆಗೆ ಸಂಬಂಧಿಸಿದಂತೆ ಸರಿಯಾಗಿ ಕಾರ್ಯ ನಿರ್ವಹಿಸದ ಹಾಗೂ ತಾಲ್ಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಕುಂದು ಕೊರತೆ ಸಭೆ ಮಾಡದ ತಹಶಿಲ್ದಾರರಿಗೆ ನೋಟೀಸ್ ಜಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್‌ನ ಕಾವೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಕಾರ್ಯಕ್ರಮಗಳ ಅನುಷ್ಟಾನಕ್ಕಾಗಿ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆ ನಡೆಸಿ ಮಾತನಾಡಿದರು.
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಅಸ್ಪೃಶ್ಯತೆ ಆಚರಣೆಗೆ ಅವಕಾಶವಿಲ್ಲ. ಎಲ್ಲಾ ವರ್ಗದ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಎಂಬ ನಾಮ ಫಲಕವನ್ನು ದೇವಸ್ಥಾನಗಳಲ್ಲಿ ಅನಾವರಣಗೊಳಿಸುವಂತೆ ಈ ಹಿಂದಿನ ಸಭೆಗಳಲ್ಲಿ ಸೂಚಿಸಲಾಗಿತ್ತು. ಈ ನಾಮಫಲಕವನ್ನು ಕಿಡಿಗೇಡಿಗಳು ತೆರವುಗೊಳಿಸಿದ್ದಲ್ಲಿ ಕ್ರಮ ಕೈಗೊಳ್ಳಿ ಎಂದು ನಿರ್ದೇಶಿಸಿದರು.
ಜಿಲ್ಲೆಯಾದ್ಯಂತ ಅಪೂರ್ಣಗೊಂಡಿರುವ ಡಾ ಬಿ ಆರ್ ಅಂಬೇಡ್ಕರ್ ಭವನದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಈಗಾಗಲೇ 7,8 ವರ್ಷಗಳ ಹಿಂದೆ ಪೂರ್ಣಗೊಂಡಿರುವ ಮೂಲ ಸೌಕರ್ಯ ಕೊರತೆಯಿರುವ ಭವನಗಳಲ್ಲಿ ನೀರು ಹಾಗೂ ಶೌಚಾಲಯಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಸಂಬಂಧಿಸಿದ ಕಾರ್ಮಿಕರುಗಳಿಗೆ ಸರಿಯಾದ ಸಮಯಕ್ಕೆ ಹಣ ಪಾವತಿಸಿ ಎಂದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಂಡಗಳ ನಿರುದ್ಯೋಗ ಯುವಕ/ ಯುವತಿಯರಿಗೆ ಕೌಶಲ್ಯಾಭಿವೃದ್ಧಿ ಇಲಾಖಾ ವತಿಯಿಂದ ನೋದಾಯಿತವಾಗಿರುವ ತರಬೇತಿ ಕೇಂದ್ರಗಳಲ್ಲಿ ಬ್ಯೂಟಿಷಿಯನ್ ತರಬೇತಿ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ಪತ್ರಿಕೆಗಳ ಮೂಲಕ ವ್ಯಾಪಕ ಪ್ರಚಾರವಾಗಬೇಕು ಎಂದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶವವನ್ನು ಸ್ಮಶಾನಕ್ಕೆ ಒತ್ತೊಯ್ಯಲು ವಾಹನದ ವ್ಯವಸ್ಥೆ ಇರುತ್ತದೆ. ಆದರೆ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಲ್ಲಿ ವ್ಯವಸ್ಥೆ ಕಲ್ಪಿಸಲು ಚಿಂತಿಸಲಾಗುವುದು ಎಂದರು.
ಯಾವುದೇ ಸರ್ಕಾರಿ ಇಲಾಖೆಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಪರಿಶಿಷ್ಟ ಜಾತಿ/ವರ್ಗದ ಹೆಸರಿನಲ್ಲಿ ಅನ್ಯರಿಗೆ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ದೂರು ಬಂದಲ್ಲಿ ಅಥವಾ ಸಾಬಿತಾದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
ಅನುಮತಿ ಕಡ್ಡಾಯ
ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ಇಂಜಿನಿಯರಿಂಗ್ ವಿಭಾಗ ಹಾಗೂ ಇನ್ನಿತರೆ ಇಲಾಖೆಗಳು ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಅನುದಾನದಡಿ ರಸ್ತೆ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಶೇಕಡಾ 40% ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದವರು ಇರಬೇಕೆಂಬ ನಿಯಮವಿದೆ. ಇದರೊಂದಿಗೆ ಕಾಮಗಾರಿ ಕೈಗೊಳ್ಳುವ ಮುನ್ನ ಜಿಲ್ಲಾ/ ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಅನುಮತಿ ಕಡ್ಡಾಯ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿ ಆನಂದ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.