ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ.
ಜಲಾಶಯದ ಇಂದಿನ ಒಳಹರಿವು 73,811 ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 40,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 123.25 ಅಡಿಗಳಾಗಿದೆ. 49.452 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 38.932 ಟಿಎಂಸಿ ನೀರು ಸಂಗ್ರಹವಾಗಿದೆ.
ಕೆಆರ್‌ಎಸ್ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಸ್ಥಿತಿ ಎದುರಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ನಿಷೇಧಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.





