Mysore
23
overcast clouds
Light
Dark

ಬಾಲ್ಯ ವಿವಾಹ ತಡೆಯಲು ಜಾಗೃತಿ ಕಾರ್ಯಕ್ರಮ ಆಯೋಜಿಸಿ: ಡಾ. ಕುಮಾರ

ಮಂಡ್ಯ: ಬಾಲ್ಯ ವಿವಾಹ ಸಮಾಜದ ಪಿಡುಗಾಗಿದ್ದು, ಇದನ್ನು ತಡೆಗಟ್ಟಲು ಹೆಚ್ಚು ಜಾಗೃತಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಇಂದು(ಮೇ.17) ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಮಿಷನ್ ವಾತ್ಸಲ್ಯ ಮಾರ್ಗಸೂಚಿಯನ್ವಯ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ, ಮಕ್ಕಳ ಸಹಾಯವಾಣಿ ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ 180 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ  105 ಬಾಲ್ಯ ವಿವಾಹವನ್ನು ತಡೆಯಲಾಗಿದ್ದು, 75 ಬಾಲ್ಯ ವಿವಾಹ ಪ್ರಕರಣಗಳ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಸ್ಥಳೀಯ ಮಟ್ಟದಲ್ಲಿ ಒಂದು ಸಮಿತಿ ರಚಿಸಿ ಬಾಲ್ಯ ವಿವಾಹ ಜರುಗಲಿಕ್ಕೆ ಕಾರಣಗಳೇನು ಎಂದು ಸಮೀಕ್ಷೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬಾಲ್ಯ ವಿವಾಹಗಳು ನಡೆದ ಮೇಲೆ ಕ್ರಮ ಕೈಗೊಳ್ಳುವುದಕ್ಕಿಂತ, ಬಾಲ್ಯ ವಿವಾಹ ನಡೆಯದಂತೆ ಜನರಲ್ಲಿ ಅರಿವು ಮೂಡಿಸುವುದು ಮುಖ್ಯವಾಗಿದೆ. ಜಿಲ್ಲೆಯಲ್ಲಿ ಹೆಚ್ಚು ಬಾಲ್ಯ ವಿವಾಹ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ಶಾಲೆ ಬಿಟ್ಟ ಹೆಣ್ಣು ಮಕ್ಕಳ ಬಗ್ಗೆ ಹಾಗೂ ನಿರಂತರ ಶಾಲೆಗೆ ಗೈರು ಹಾಜರಾಗುವ ಮಕ್ಕಳ ಬಗ್ಗೆ ಗಮನವಹಿಸಿ ಮಾಹಿತಿ ನೀಡಬೇಕೆಂದು ತಿಳಿಸಿದರು.

ಬಳಿಕ ಮಕ್ಕಳ ರಕ್ಷಣಾ ಸಮಿತಿಯ ಕಾರ್ಯಗಳು, ವಿಶೇಷ ಪಾಲನೆ ಯೋಜನೆ ನಡೆಯುತ್ತಿರುವ ಬಗ್ಗೆ ಮತ್ತು ದತ್ತು ಯೋಜನೆಗೆ ಸಂಬಂಧಿಸಿದಂತೆ ದತ್ತು ಪ್ರಕ್ರಿಯೆ ಬಗ್ಗೆ ವಿವರಗಳನ್ನು ಪಡೆದುಕೊಂಡರು. ಮಂಡ್ಯ ಜಿಲ್ಲೆಯಲ್ಲಿ 02 ಸರ್ಕಾರಿ ಬಾಲ ಮಂದಿರಗಳು, 02 ಸರ್ಕಾರಿ ಅನುದಾನಿತ ದತ್ತು ಸೇವಾ ಕೇಂದ್ರಗಳು, 16 ಸರ್ಕಾರೇತರ ಮಕ್ಕಳ ಪಾಲನ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ನೀಡಿದರು.

ಬಾಲನ್ಯಾಯ ಕಾಯ್ದೆಯಡಿ ಒಟ್ಟು 20 ಮಕ್ಕಳ ಪಾಲನಾ ಸಂಸ್ಥೆಗಳು ನೋಂದಣಿಯಾಗಿವೆ. 02 ಮಕ್ಕಳ ಪಾಲನ ಸಂಸ್ಥೆಗಳು ಬಾಲ ನ್ಯಾಯ ಕಾಯ್ದೆಯಡಿ ನವೀಕರಣಗೊಂಡಿದ್ದು, ನವೀಕರಣಕ್ಕೆ ಪ್ರಸ್ತಾವನೆ ಸಲ್ಲಿಸಲು ಉಳಿದ 18 ಸಂಸ್ಥೆಗಳು ಬಾಕಿ ಇವೆ ಎಂದರು.

ಜಿಲ್ಲಾ ಮಕ್ಕಳ ಸಹಾಯವಾಣಿ – 1098:

ಜಿಲ್ಲಾ ಮಕ್ಕಳ ಸಹಾಯವಾಣಿಗೆ 1089 ಗೆ 2023 – ಸೆಪ್ಟೆಂಬರ್ ತಿಂಗಳಿಂದ 2024 ರ ಮಾರ್ಚ್ – 2024 ರವರೆಗೆ  ಗೆ ಒಟ್ಟು 365 ಪ್ರಕರಣಗಳು ದಾಖಲಾಗಿದೆ. ಅದರಲ್ಲಿ ಶೈಕ್ಷಣಿಕ ಸಮಸ್ಯೆ – 84, ಬಾಲ್ಯ ವಿವಾಹ – 78, ಕೌಟುಂಬಿಕ ಸಮಸ್ಯೆ – 11, ವೈದ್ಯಕೀಯ ಸಮಸ್ಯೆ – 1, ಪ್ರಾಯೋಜಕತ್ವ – 59, ದೈಹಿಕ ಹಿಂಸೆ – 34, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ – 10, ಬಾಲಕಾರ್ಮಿಕ – 9, ಕಾಣೆಯಾದ ಮಕ್ಕಳು – 30, ಭಿಕ್ಷಾಟಣೆ – 8, ಆಪ್ತ ಸಮಾಲೋಚನೆ – 5, ಇತರೆ – 36 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್‌ ಮಾತನಾಡಿ  ಜಿಲ್ಲೆಯಲ್ಲಿ 18 ವರ್ಷದೊಳಗಿರುವ ಹೆಣ್ಣುಮಕ್ಕಳ ಸಂಖ್ಯೆಯ ಬಗ್ಗೆ ಮಾಹಿತಿ ಪಡೆದು, ಅಂತಹ ಹೆಣ್ಣು ಮಕ್ಕಳು ಹಾಗೂ ಪೋಷಕರಿಗೆ ಮುಂಚಿತವಾಗಿಯೇ ಬಾಲ್ಯ ವಿವಾಹದ ಬಗ್ಗೆ ಅರಿವು ಮೂಡಿಸುವ ಮೂಲಕ ಬಾಲ್ಯ ವಿವಾಹವನ್ನು ತಡೆಗಟ್ಟಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದಲ್ಲಿ ಆಶಾ ಕಾರ್ಯಕರ್ತೆಯರು, ಶಾಲಾ ಹಾಗೂ ಅಂಗನವಾಡಿ ಶಿಕ್ಷಕರು ಕೂಡಲೇ ಸಂಬಂಧಪಟ್ಟವರಿಗೆ ಮಾಹಿತಿ ನೀಡಬೇಕು. ಜಿಲ್ಲೆಯ ಸಾರ್ವಜನಿಕರು ಕೂಡ ಬಾಲ್ಯ ವಿವಾಹಗಳು ಜರುಗದಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಪೊಲೀಸ್ ಇನ್ಸ್ ಪೆಕ್ಟರ್ ಬಿ. ದೇವರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್ ರಾಜಮೂರ್ತಿ, ನಿರೂಪಣಾಧಿಕಾರಿ ಧರಣಿ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ, ಕೌಶಲಾಭಿವೃದ್ಧಿ ಇಲಾಖೆಯ ಅಧಿಕಾರಿ ನಾಗಾನಂದ ಅವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.