ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ “ಕನ್ನಡಕ್ಕಾಗಿ ಓಟ” ಎಂಬ ಘೋಷವಾಕ್ಯದೊಂದಿಗೆ ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬರೂ ಮ್ಯಾರಥಾನ್‌ನಲ್ಲಿ ಭಾಗವಹಿಸಬೇಕು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ತಿಳಿಸಿದರು.
ಅವರು ಇಂದು(ಡಿ.15) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಏರ್ಪಡಿಸಲಾಗಿರುವ “ಕನ್ನಡಕ್ಕಾಗಿ ಓಟ” ಮ್ಯಾರಥಾನ್ ಕಾರ್ಯಕ್ರಮದ ಟೀ ಶರ್ಟ್ ಬಿಡುಗಡೆ ಮಾಡಿ ಮಾತನಾಡಿದರು.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ “ಕನ್ನಡಕ್ಕಾಗಿ ಓಟ” ಮ್ಯಾರಥಾನ್ ಡಿಸೆಂಬರ್ 17 ರಂದು ಬೆಳಿಗ್ಗೆ 7.00 ಗಂಟೆಗೆ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಸಮ್ಮೇಳನ ನಡೆಯುವ ಸ್ಥಳ (ಸ್ಯಾಂಟೋ ಆಸ್ಪತ್ರೆ ಹಿಂಭಾಗ) ದವರೆಗೆ ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಎಂದರು.
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕುಡಿಯುವ ನೀರು, ಬಿಸ್ಕೆಟ್ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ವೈದ್ಯರ ತಂಡ ಸೇರಿದಂತೆ ಎಲ್ಲಾ ಸಕಲ ಸಿದ್ದತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ ಎಂದು ಹೇಳಿದರು.
ಆರೋಗ್ಯಕ್ಕಾಗಿ ಓಡಿ ನಿಮ್ಮ ಆರೋಗ್ಯವನ್ನು ನೀವೇ ವೃದ್ಧಿಸಿಕೊಳ್ಳಬೇಕು ಅದಕ್ಕಾಗಿಯಾದರೂ ಓಡಬೇಕು. ಸಾರ್ವಜನಿಕರು ಸಂತೋಷದಿಂದ ಈ ಸ್ಪರ್ಧೆಯಲ್ಲಿ ಭಾಗಿಯಾಗಬೇಕು ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ, ವಿಜೃಂಭಣೆಯಿಂದ ಎಲ್ಲರೂ ಒಟ್ಟಾಗಿ ಸೇರಿ ಆಚರಣೆ ಮಾಡಬೇಕು ಎಂದು ಹೇಳಿದರು.
ಸಮ್ಮೇಳನವು ಯಾವುದೇ ಅಡತಡೆ ಇಲ್ಲದೆ ನಡೆಯಬೇಕೆಂದು ಕಳೆದ 4,5 ತಿಂಗಳಿಂದಲೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು ಒಟ್ಟಾಗಿ ಸೇರಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಅದರಂತೆ ಜನರ ಸಹಕಾರವೂ ನಮಗೆ ಬಹಳ ಮುಖ್ಯ. ಆದ್ದರಿಂದ ಎಲ್ಲರೂ ಒಟ್ಟಾಗಿ ಸೇರಿ ಈ ಸಮ್ಮೇಳನದಲ್ಲಿ ಕೈ ಜೋಡಿಸಬೇಕು ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನವು ಹಿಂದೆಂದಿಗಿಂತಲೂ ವಿಶಿಷ್ಟಮಯವಾಗಿ ಹಾಗೂ ವಿಶ್ವಮಟ್ಟದಲ್ಲಿ ಹೆಸರು ಮಾಡುವ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ಸಾರ್ವಜನಿಕರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಎಲ್ಲಾ ಸಂಘ-ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರುಗಳು, ಎಲ್ಲಾ ಅಧಿಕಾರಿ- ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಿ ಎಂದು ಹೇಳಿದರು.
ಸ್ಪರ್ಧೆಯಲ್ಲಿ ಸುಮಾರು 35,000 ದಿಂದ 40,000 ಸಾವಿರದವರೆಗೂ ಜನರು ಭಾಗವಹಿಸಬೇಕು. ಕಾರ್ಯಕ್ರಮದ ಉದ್ಘಾಟನೆಗೆ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಆಗಮಿಸಲಿದ್ದು ಅವರೊಡನೆ ವಿನಯ್ ಗುರೂಜಿ ಹಾಗೂ ಚಲನಚಿತ್ರದ ನಟ-ನಟಿಯರು ಕೂಡ ಆಗಮಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್ (ನಾಗೇಶ್), ಮುಡಾ ಅಧ್ಯಕ್ಷ ನಹೀಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮೋಹನ್, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಚಾಲಕಿ ಮೀರಾ ಶಿವಲಿಂಗಯ್ಯ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಗೌರವ ಕಾರ್ಯದರ್ಶಿ ವಿ.ಹರ್ಷ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.





