ಮಂಡ್ಯ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಗುರುವಾರ(ಜು.18) ರೈತರು ಪ್ರತಿಭಟನಾ ಧರಣಿ ನಡೆಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ರೈತರು, ರೈತ ವಿರೋಧಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕವಾಗಿ ಖಾತ್ರಿಗೊಳಿಸಬೇಕು. ಕಬ್ಬಿನ ಎಫ್‌ಆರ್‌ಪಿ ದರ ನಿಗದಿಪಡಿಸಬೇಕು. ಬರ ಪರಿಹಾರದಲ್ಲಿ ರಾಜ್ಯದ ಜನತೆಗೆ ತಾರತಮ್ಯವಾಗಿರುವುದನ್ನು ಸರಿಪಡಿಸಿ ರೈತರಿಗೆ ಪರಿಹಾರ ಪಾವತಿಗೆ ಮುಂದಾಗಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.
ರಾಜ್ಯ ಸರ್ಕಾರವು ರೈತ ವಿರೋಧಿ ಕಾಯ್ದೆಗಳನ್ನು ರದ್ದು ಮಾಡಲು ಕೇಂದ್ರಕ್ಕೆ ಒತ್ತಡ ಹೇರಬೇಕು. ಸಕ್ಕರೆ ಕಾರ್ಖನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಪಾವತಿಸಬೇಕು. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಕೆಆರ್‌ಎಸ್‌ನಲ್ಲಿ ಶಾಶ್ವತವಾಗಿ ಗಣಿಗಾರಿಕೆಯನ್ನು ನಿಷೇಧಿಸಬೇಕು. ಪರೀಕ್ಷಾರ್ಥಕ್ಕೂ ಸ್ಟೋಟ ಮಾಡಬಾರದು, ರೈತ ಆತ್ಮಹತ್ಯೆ ತಡೆಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.