ಮಂಡ್ಯ : ಗಣೇಶ ಉತ್ಸವದ ಬಳಿಕ ಮೂರ್ತಿಯ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ಎಂ.ಎಲ್.ತುಳಸಿಧರ್ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.
ಗೌರಿ-ಗಣೇಶ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಬಳಕೆ ಮಾಡುತ್ತಿರುವುದು ಸರಿಯಲ್ಲ. ಶಬ್ಧ ಮಾಲಿನ್ಯದ ಜೊತೆಗೆ ವೃದ್ಧರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ ಗಲಾಟೆಗೂ ಅವಕಾಶ ಮಾಡಿಕೊಡುತ್ತಿದೆ ಎಂದಿದ್ದಾರೆ.
ಡಿಜೆ ಶಬ್ದ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಹೃದಯದ ಆರೋಗ್ಯ ಸಮಸ್ಯೆ ಇರುವವರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಅದೇ ರೀತಿ ಶಬ್ದ ಮಾಲಿನ್ಯದಿಂದ ಇತರ ಆರೋಗ್ಯದ ಮೇಲೆ ಪರೋಕ್ಷ ಪರಿಣಾಮ ಬೀರುತ್ತದೆ. ಮೆರವಣಿಗೆ ಸಾಗುವ ಹಾದಿಯಲ್ಲಿ ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್‌ಗಳು ಇರಲಿವೆ. ಚಿಕಿತ್ಸೆಗೆ ದಾಖಲಾಗಿರುವ ಅನಾರೋಗ್ಯ ಪೀಡಿತರ ಮೇಲೆ ಡಿಜೆ ಸೌಂಡಿನಿಂದ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆ ಹೆಚ್ಚಿದೆ ಎಂದು ದೂರಿದ್ದಾರೆ.
ಡಿಜೆ ನಿರ್ಬಂಧಿಸಿ ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆಯಲ್ಲಿ ಜಾನಪದ ಕಲೆಗಳಾದ ಪೂಜಾ ಕುಣಿತ, ಡೊಳ್ಳು ಕುಣಿತ, ವೀರಗಾಸೆ, ನಂದಿ ಕಂಬ, ಯಕ್ಷಗಾನ ಹಾಗೂ ಇನ್ನಿತರಕಲಾ ತಂಡಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಕೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪೊಲೀಸ್ ಅಧಿಕ್ಷಕರಲ್ಲಿ ಮನವಿ ಮಾಡಿದ್ದಾರೆ.





