Mysore
22
broken clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ಮರು ಪರೀಕ್ಷೆ

ಮಂಡ್ಯ: ಏಪ್ರಿಲ್ 29 ರಿಂದ ಮೇ 16 ರವರೆಗೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಮರುಪರೀಕ್ಷೆ ನಡೆಯಲಿದೆ. ಮೊದಲನೇ ಪರೀಕ್ಷೆ ನಡೆದ ರೀತಿಯಲ್ಲೆ ಪಾರದರ್ಶಕವಾಗಿ ಪ್ರಾಮಾಣಿಕವಾಗಿ ಪರೀಕ್ಷೆ ನಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದವರಿಗೆ ಮರುಪರೀಕ್ಷೆ ನಡೆಸುವ ಕುರಿತು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು. ಜಿಲ್ಲಾ ವ್ಯಾಪ್ತಿಯ 08 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ ಎಂದರು.

ಕೆ. ಆರ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ನಾಗಮಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀರಂಗಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಂಡ್ಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ (ಕಲ್ಲು ಕಟ್ಟಡ) ಕಾಲೇಜು, ಮಂಡ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು( ಮಾಜಿ ಪುರಸಭೆ), ಮದ್ದೂರು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಪಾಂಡವಪುರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಳವಳ್ಳಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯಲಿದೆ.

ಪರೀಕ್ಷೆಯು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಸುತ್ತಳತೆಯಲ್ಲಿ 144ನೇ ಕಲಂ ಜಾರಿಗೊಳಿಸಬೇಕು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಬೇಕು ಎಂದು ನಿರ್ದೇಶನ ನೀಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರುಗಳನ್ನು ಹೊರತುಪಡಿಸಿ ಕೊಠಡಿ ಮೇಲ್ವಿಚಾರಕರು ಹಾಗೂ ಇತರೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್ ಇತ್ಯಾದಿ ಇಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ, ಸೂಕ್ತ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಬೇಕು ಎಂದರು.

ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ಚೆಲುವಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ರಾಜೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್ ಎಚ್ ನಿರ್ಮಲ ಸೇರಿದಂತೆ ಇನ್ನಿತರರು  ಉಪಸ್ಥಿತರಿದ್ದರು.

Tags: