ಮಂಡ್ಯ: ಸೆಪ್ಟೆಂಬರ್.25 ರಿಂದ 28 ರವರೆಗೆ ಶ್ರೀರಂಗಪಟ್ಟಣ ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ಹೇಳಿದರು.
ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀರಂಗಪಟ್ಟಣ ದಸರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶ್ರೀರಂಗಪಟ್ಟಣ ದಸರಾದಲ್ಲಿ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮ ವಹಿಸಿ, ಈ ಬಾರಿಯ ಶ್ರೀರಂಗಪಟ್ಟಣ ದಸರಾ ವಿಶೇಷವಾಗಿ ಇರುತ್ತೆ. ನಾಲ್ಕು ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಶ್ರೀರಂಗಪಟ್ಟಣ ದಸರಾ ಉದ್ಘಾಟಕರ ಆಯ್ಕೆಯನ್ನು ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು, ಆನೆಗಳ ಜವಾಬ್ದಾರಿ DFOಗೆ ಕೊಟ್ಟಿದ್ದೇವೆ. ಶ್ರೀರಂಗಪಟ್ಟಣ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸ್ಥಳೀಯ ಕಲಾವಿದರಿಗೆ ಆದ್ಯತೆ ಕೊಡುತ್ತೇವೆ. ಸ್ಥಳೀಯರನ್ನ ಉದಾಸೀನ ಮಾಡುವ ಪ್ರಶ್ನೆ ಇಲ್ಲ ಎಂದು ಹೇಳಿದರು.
ಸಭೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಡಿಸಿ ಡಾ.ಕುಮಾರ, ಸಿಇಓ ಕೆ.ಆರ್.ನಂದಿನಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಸಿ ಶ್ರೀನಿವಾಸ್, ನಗರಸಭೆ ಅಧ್ಯಕ್ಷ ನಾಗೇಶ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.





