Mysore
20
overcast clouds
Light
Dark

ಸಂವಿಧಾನ ಪ್ರಸ್ತಾವನೆ ಓದಿದ ಪ್ರತಿಭಟನಾನಿರತರು

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡುವಂತೆ ಆದೇಶಿಸಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ವಿರುದ್ಧ ಮಂಡ್ಯ ಜಿಲ್ಲಾ ರೈತ ಹಿತರಕ್ಷಣ ಸಮಿತಿ ನಡೆಸುತ್ತಿರುವ ಧರಣಿಯಲ್ಲಿ ಹೋರಾಟಗಾರರು ಭಾರತದ ಸಂವಿಧಾನ ಪ್ರಸ್ತಾವನೆ ಓದುವ ಮೂಲಕ ಪ್ರತಿಭಟನೆ ನಡೆಸಿದರು.

ನಗರದ ಸರ್ ಎಂ ವಿ ಪ್ರತಿಮೆ ಎದುರು ನಿರಂತರ ಧರಣಿ ವೇಳೆ ಕಾವೇರಿ ಹೋರಾಟಗಾರರು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆ ಓದುವ ಮೂಲಕ ಸಂವಿಧಾನ ರಕ್ಷಣೆಯ ಪ್ರತಿಜ್ಞೆ ಮಾಡಿದರು.

ಭಾರತದ ಜನಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ,ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ, ನಮ್ಮ ಸಂವಿಧಾನ ಸಭೆಯಲ್ಲಿ 1949 ನೆ ಇಸವಿ ನವೆಂಬರ್ ತಿಂಗಳ ಇಪ್ಪತ್ತಾರನೆಯ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ,ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ “ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಓದಿದಾಗ ಇತರ ಹೋರಾಟಗಾರರು ದನಿಗೂಡಿಸಿ ಪ್ರತಿಜ್ಞೆ ಸ್ವೀಕರಿಸಿದರು.

ರೈತ ಹಿತರಕ್ಷಣಾ ಸಮಿತಿಯ ಸುನಂದ ಜಯರಾಂ, ಕೆ.ಬೋರಯ್ಯ ಗುರುಪ್ರಸಾದ್ ಕೆರಗೋಡು,ರೈತ ಸಂಘದ ಇಂಡವಾಳು ಚಂದ್ರಶೇಖರ್. ಮುದ್ದೇಗೌಡ, ಕೀಲಾರ ಕೃಷ್ಣ,ದಸಂಸ ಎಂ. ವಿ ಕೃಷ್ಣ ಕರ್ನಾಟಕ ರಕ್ಷಣಾ ವೇದಿಕೆ ಮಾ.ಸೋ. ಚಿದಂಬರ್, ಸೌಭಾಗ್ಯ ಮಹಾದೇವ್.ಶಂಕರೇಗೌಡ ಕಬ್ಬು ಬೆಳೆಗಾರರ ಸಂಘದ ಶಂಭೂನಹಳ್ಳಿ ಕೃಷ್ಣ ನೇತೃತ್ವ ವಹಿಸಿದ್ದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ