ಮಂಡ್ಯ: ಮನ್‌ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಶೀಲರಾಗಲು ಕಾರಣಕರ್ತರಾದ ಸಹಕಾರ ಕ್ಷೇತ್ರದ ಎಲ್ಲಾ ಮತದಾರರಿಗೆ, ಜಿಲ್ಲೆಯ ಜನರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಮನ್‌ಮುಲ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ ಹೆಚ್ಚಿನ ಮಟ್ಟದ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಅವರ ನಂಬಿಕೆಯನ್ನು ಉಳಿಸಿಕೊಳ್ಳುವುದಾಗಿ ಭರವಸೆ ನೀಡಿದರು.
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನಮ್ಮ ನಾಯಕರ ವಿರುದ್ಧ ಡೆಡ್ ಹಾರ್ಸ್, ಜಸ್ಟ್ ಪಾಸ್ ನಂತಹ ಹೇಳಿಕೆಗಳನ್ನು ನೀಡಿ ಟೀಕಿಸಿದ್ದು, ಅವರಿಗೆ ಸಹಕಾರ ಬಂಧುಗಳು ಮನ್‌ಮುಲ್ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿದ್ದಾರೆ ಎಂದರು.
ಲೋಕಸಭಾ ಚುನಾವಣೆಯ ನಂತರದ ನಡೆದ ಜಿಲ್ಲಾ ಮಟ್ಟದ ಚುನಾವಣೆಯಲ್ಲಿ ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯ, ಮೈಷುಗರ್‌ಗೆ ಆರ್ಥಿಕ ಶಕ್ತಿ ನೀಡಿದ ಮುಖ್ಯಮಂತ್ರಿ ಎನ್.ಚಲುವರಾಯಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರುಗಳಿಗೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಶೀರ್ವಾದ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಎಸ್ಸಿ ಎಸ್ಟಿ ವಿಭಾಗದ ಜಿಲ್ಲಾಧ್ಯಕ್ಷ ಶ್ರೀಧರ್, ಉಪಾಧ್ಯಕ್ಷ ವಿಜಿಕುಮಾರ್, ನಾಗರಾಜ್, ಉದಯ್, ಕಾಂಗ್ರೆಸ್ ನಗರ ಅಧ್ಯಕ್ಷ ರುದ್ರಪ್ಪ ಇದ್ದರು.