ಮೈಸೂರು: ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಸಂವಿಧಾನದಲ್ಲಿ ಅವಕಾಶವಿಲ್ಲ. ಹೀಗಾಗಿ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿಯಿಂದ ಬಿಜೆಪಿಗೆ ಲಾಭವಾಗುತ್ತೋ ಬಿಡುತ್ತೋ ಎನ್ನುವ ಪ್ರಶ್ನೆಯಲ್ಲ. ಇದನ್ನು ಜಾರಿ ಮಾಡಲು ಹೊರಟರೆ ವ್ಯಾಪಕ ವಿರೋಧ ವ್ಯಕ್ತವಾಗುತ್ತದೆ. ನಮ್ಮ ಸಂವಿಧಾನದಲ್ಲಿ ಏನಿದೆಯೋ ಅದಕ್ಕೆ ನಾವು ಬದ್ಧರಾಗಿರಬೇಕಾಗುತ್ತದೆ. ಹೀಗಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ನನ್ನ ವಿರೋಧವಿದೆ ಎಂದರು.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅವಕಾಶ ಕೊಡದ ಪ್ರಧಾನಿ ನರೇಂದ್ರ ಮೋದಿ,ಸಮುದ್ರಕ್ಕೆ ಹರಿದು ಹೋಗುವ ನೀರು ಬಳಸಲು ಅನುಮತಿ ಕೊಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಮೇಕೆದಾಟು ಯೋಜನೆಗೆ ಮೋದಿ ಅನುಮತಿ ನೀಡಲಿಲ್ಲ. ತಮಿಳುನಾಡು ಸರ್ಕಾರ ಸಮುದ್ರಕ್ಕೆ ಹರಿಯುವ ಕಾವೇರಿ ನೀರು ಬಳಸೋಕೆ ಅನುಮತಿ ಕೊಟ್ಟಿದ್ದಾರೆ. ಸೇಲಂ ಜಿಲ್ಲೆ ಸೇರಿದಂತೆ ಆಸುಪಾಸಿನ ಜಿಲ್ಲೆಗಳ ೪ ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿಗೆ ಈ ನೀರು ಬಳಕೆ ಮಾಡಲಾಗುತ್ತಿದೆ. ತಮಿಳುನಾಡಿನ ಎಐಎಡಿಎಂಕೆ ಪಕ್ಷದೊಂದಿಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ಎಐಎಡಿಎಂಕೆಗೆ ಅನುಕೂಲವಾಗಲಿ ಎಂದೇ ಅಲ್ಲಿನ ನೀರಾವರಿ ಯೋಜನೆಗೆ ಮೋದಿ ಅನುಮತಿ ಕೊಟ್ಟಿದ್ದಾರೆ. ಈ ವಿಚಾರವನ್ನು ಇಲ್ಲಿಗೇ ಬಿಡುವುದಿಲ್ಲ. ಮೇಕೆದಾಟು ವಿಚಾರವಾಗಿ ಬಹಳ ಹಿಂದೆಯೇ ಪ್ರಧಾನಿಗೆ ಪತ್ರ ಬರೆದಿದ್ದೆ. ಆ ಪತ್ರಕ್ಕೆ ಇಲ್ಲಿಯ ತನಕ ಪ್ರತಿಕ್ರಿಯೆ ನೀಡಿಲ್ಲ. ಮುಂಬರುವ ರಾಜ್ಯಸಭೆ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು.