Increase in heart attack cases:
ಬೆಂಗಳೂರು : ರಾಜ್ಯದಾದ್ಯಂತ ಹೃದಯಘಾತ ಪ್ರಕರಣಗಳು ಹೆಚ್ಚುತ್ತಿವೆ. ವಿಶೇಷವಾಗಿ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದೆ. ಇದರಿಂದ ಆತಂಕಗೊಂಡ ಜನತೆ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತಿದ್ದಾರೆ. ಹೀಗಾಗಿ ಈ ಆಸ್ಪತ್ರೆಗೆ ಇತರೆ ಜಿಲ್ಲೆಗಳಿಂದ ತುರ್ತಾಗಿ ತಜ್ಞ ವೈದ್ಯರನ್ನು ನಿಯೋಜನೆ ಮಾಡುವ ಕುರಿತು ಶಾಸಕ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಶಾಸಕ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ, 30 ರಿಂದ 50 ವರ್ಷ ವಯಸ್ಸಿನವರಲ್ಲಿ ಹೃದಯಾಘಾತ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದು ಮತ್ತು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ರೋಗಿಗಳ ಸಂಖ್ಯೆ ಸಾಮರ್ಥ್ಯಕ್ಕಿಂತ ದುಪ್ಪಟ್ಟಾಗಿರುವ (ದಿನಕ್ಕೆ 700ರ ಬದಲಿಗೆ 1500-2000) ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ ಮಾಡಬೇಕಿದೆ. ಅಲ್ಲದೆ, ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಾಥಮಿಕ ತಪಾಸಣೆ ವ್ಯವಸ್ಥೆ, ಹೃದಯಾಘಾತದ ಕಾರಣಗಳ ಕುರಿತು ಸಮಗ್ರ ಅಧ್ಯಯನ, ಜನಜಾಗೃತಿ ಮತ್ತು ಆರೋಗ್ಯ ಮೂಲಸೌಕರ್ಯ ಬಲಪಡಿಸುವಿಕೆ ಸೇರಿದಂತೆ ಹಲವು ಮಹತ್ವದ ಅಂಶಗಳನ್ನು ಪ್ರಸ್ತಾಪಿಸಿ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ಪತ್ರದಲ್ಲಿ ಒತ್ತಾಯಿಸಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಂದಿಸಿದ್ದಾರೆ.
ಪತ್ರದ ಸಾರಾಂಶ:
ರಾಜ್ಯದಾದ್ಯಂತ, ವಿಶೇಷವಾಗಿ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗಗಳಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದು ಗಮನಕ್ಕೆ ಬಂದಿದೆ. 30 ರಿಂದ 50 ವರ್ಷ ವಯಸ್ಸಿನವರು ಹೆಚ್ಚಾಗಿ ಬಲಿಯಾಗುತ್ತಿದ್ದು, ಚಿಕ್ಕ ಮಕ್ಕಳು ಮತ್ತು ಯುವಜನತೆಯೂ ಈ ಸಮಸ್ಯೆಗೆ ತುತ್ತಾಗುತ್ತಿರುವುದು ಅತ್ಯಂತ ಕಳವಳಕಾರಿಯಾಗಿದೆ. ಈ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಮತ್ತು ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಡೆಯಲು ಸರ್ಕಾರದ ತಕ್ಷಣದ ಮತ್ತು ದೀರ್ಘಕಾಲೀನ ಕ್ರಮಗಳು ಅತ್ಯಗತ್ಯ.
ಇನ್ನು ಮೈಸೂರಿನ ಜಯದೇವ ಆಸ್ಪತ್ರೆಗೆ ಹೆಚ್ಚುವರಿ ತಜ್ಞ ವೈದ್ಯರ ನೇಮಕಾತಿ ಅಗತ್ಯವಾಗಿದೆ. ಕಾರಣ, ಹೃದಯಾಘಾತ ಪ್ರಕರಣಗಳ ಹೆಚ್ಚಳದಿಂದಾಗಿ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ರೋಗಿಗಳು ಚಿಕ್ಕಪುಟ್ಟ ಸಮಸ್ಯೆಗಳಿಗೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅಂದರೆ ಇಲ್ಲಿ “ದಿನಕ್ಕೆ 700 ಮಂದಿ ರೋಗಿಗಳನ್ನು ಪರೀಕ್ಷಿಸಬಹುದಾಗಿದ್ದು, ಈಗ 1500 ರಿಂದ 2000 ಕ್ಕೂ ಹೆಚ್ಚು ರೋಗಿಗಳು ಆಗಮಿಸುತ್ತಿದ್ದಾರೆ”. ಇದನ್ನು ನಿಭಾಯಿಸಲು, ಹೆಚ್ಚುವರಿ ಹೃದ್ರೋಗ ತಜ್ಞ ವೈದ್ಯರ ನೇಮಕಾತಿ ತುರ್ತಾಗಿ ಆಗಬೇಕಿದೆ. ತುರ್ತು ಚಿಕಿತ್ಸಾ ಘಟಕದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಮತ್ತು ಉತ್ತಮ ಚಿಕಿತ್ಸೆ ಒದಗಿಸಲು, ತಾತ್ಕಾಲಿಕವಾಗಿ ನಿಯೋಜನೆ (Deputation) ಮೂಲಕವಾದರೂ ತಜ್ಞ ವೈದ್ಯರನ್ನು ನಿಯೋಜಿಸಬೇಕು. ಈ ಕ್ರಮವು ಆಸ್ಪತ್ರೆಯ ಮೇಲಿನ ಹೊರೆಯನ್ನು ಕಡಿಮೆ ಮಾಡಿ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಲಭ್ಯವಾಗುವಂತೆ ಮಾಡುತ್ತದೆ.
ಮುಂದುವರೆದು ಆಯಾ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಯ ಲಕ್ಷಣ ಕಂಡುಬಂದವರು ಪ್ರಾರ್ಥಮಿಕ ಪರೀಕ್ಷೆಗೊಳಪಟ್ಟು (ಸ್ಕ್ರೀನಿಂಗ್ ಟೆಸ್ಟ್), ಹೆಚ್ಚಿನ ಚಿಕಿತ್ಸೆ ಅಗತ್ಯವಿರುವವರನ್ನು ಮಾತ್ರ ಮೈಸೂರು ಜಯದೇವಕ್ಕೆ ಕಳುಹಿಸುವ ವ್ಯವಸ್ಥೆಯೂ ಆಗಬೇಕಿದೆ. ಇದರಿಂದ ಮುಖ್ಯ ಆಸ್ಪತ್ರೆಯಲ್ಲಿ ಒತ್ತಡ ತಪ್ಪುತ್ತದೆ. ಜತೆಗೆ ಈ ಭಾಗದಲ್ಲಿ ಹೃದಯಾಘಾತದಿಂದ ಸಂಭವನೀಯ ಸಾವುಗಳನ್ನೂ ತಪ್ಪಿಸಬಹುದಾಗಿದೆ.
ಸಮಸ್ಯೆಯ ಆಳವಾದ ಅಧ್ಯಯನ ಮತ್ತು ಕಾರಣಗಳು : ಈ ಹೃದಯಾಘಾತ ಪ್ರಕರಣಗಳ ಹೆಚ್ಚಳಕ್ಕೆ ಕಾರಣಗಳನ್ನು ವೈಜ್ಞಾನಿಕವಾಗಿ ಮತ್ತು ಸಮಗ್ರವಾಗಿ ಅಧ್ಯಯನ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೆಳಗಿನ ಅಂಶಗಳ ಬಗ್ಗೆ ಆಳವಾದ ಅಧ್ಯಯನವಾಗಬೇಕಿದೆ.
ಭೌಗೋಳಿಕ ವ್ಯಾಪ್ತಿ: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಪ್ರಕರಣಗಳ ಅನುಪಾತವನ್ನು ವಿಶ್ಲೇಷಿಸುವುದು, ಇವುಗಳ ಹೆಚ್ಚಳಕ್ಕೆ ಕಾರಣಗಳನ್ನು ಗುರುತಿಸುವುದು.
ಜೀವನಶೈಲಿ ಮತ್ತು ಅಭ್ಯಾಸಗಳು: ಅನುವಂಶೀಯತೆ, ಆಹಾರ ಪದ್ಧತಿ, ಆಧುನಿಕ ಜೀವನಶೈಲಿ, ದೈಹಿಕ ಚಟುವಟಿಕೆಯ ಕೊರತೆ, ಒತ್ತಡ, ಧೂಮಪಾನ, ಮದ್ಯಪಾನ ಮತ್ತು ಇತರ ವ್ಯಸನಗಳ ಪಾತ್ರದ ಬಗ್ಗೆ ಸಮಗ್ರ ಅಧ್ಯಯನ.
ಪರಿಸರ ಅಂಶಗಳು: ಆಹಾರ ಪದಾರ್ಥಗಳಲ್ಲಿನ ಕಲಬೆರಕೆ (Adulteration), ವಾಯು ಮತ್ತು ಜಲ ಮಾಲಿನ್ಯದಂತಹ ಪರಿಸರ ಅಂಶಗಳು ಹೃದಯದ ಆರೋಗ್ಯದ ಮೇಲೆ ಬೀರುತ್ತಿರುವ ಪರಿಣಾಮದ ಬಗ್ಗೆ ತಜ್ಞರ ಸಮಿತಿಯಿಂದ ಅಧ್ಯಯನ ನಡೆಯಬೇಕು.
ಆರೋಗ್ಯ ಸಮಸ್ಸೆಗಳು: ರಕ್ತದೊತ್ತಡ, ಮಧುಮೇಹ, ಕೊಲೆಸ್ಟ್ರಾಲ್ನಂತಹ ಪೂರ್ವಭಾವಿ ಕಾಯಿಲೆಗಳ ನಿರ್ವಹಣೆ ಮತ್ತು ಹೃದಯದ ಆರೋಗ್ಯದ ಬಗ್ಗೆ ಜನರಲ್ಲಿ ಅರಿವಿನ ಕೊರತೆ.
ಜನಜಾಗೃತಿ ಮತ್ತು ಶಿಕ್ಷಣ: ಈ ಕುರಿತು ಜನಸಾಮಾನ್ಯರಲ್ಲಿ ವ್ಯಾಪಕ ಅರಿವು ಮೂಡಿಸುವುದು ಪ್ರತಿ ತಾಲ್ಲೂಕಿನಲ್ಲಿ ಜಾಗೃತಿ ಮೂಡಿಸುವುದು ಅತ್ಯಂತ ಮಹತ್ವದಾಗಿದೆ. ರಾಜ್ಯದ ಎಲ್ಲಾ ವೈದ್ಯಕೀಯ ಶಿಕ್ಷಣ ಸಂಸ್ಥೆ ಹಾಗೂ ನರ್ಸಿಂಗ್ ಕಾಲೇಜುಗಳ ಸಹಯೋಗದಿಂದಾಗಿ ಹೃದಯಾಘಾತದ ಲಕ್ಷಣಗಳು, ತಡೆಗಟ್ಟುವ ಕ್ರಮಗಳು, ಆರೋಗ್ಯಕರ ಜೀವನಶೈಲಿಯ ಪ್ರಾಮುಖ್ಯತೆ ಮತ್ತು ತುರ್ತು ಸಂದರ್ಭಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಣ್ಣ ಎದೆನೋವು, ಕುತ್ತಿಗೆ ನೋವು, ಬೆನ್ನು ನೋವುಗಳಿಗೂ ಜನರು ಭಯಪಟ್ಟು ಆಸ್ಪತ್ರೆಗಳಿಗೆ ಧಾವಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಸರಿಯಾದ ಮಾರ್ಗದರ್ಶನ ಮತ್ತು ಆತಂಕ ನಿವಾರಣಾ ಶಿಬಿರಗಳನ್ನು ಏರ್ಪಡಿಸಬೇಕು.
ಆರೋಗ್ಯ ಮೂಲಸೌಕರ್ಯ ಬಲಪಡಿಸುವಿಕೆ: ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳನ್ನು ನಿಭಾಯಿಸಲು ಪ್ರಸ್ತುತ ಆರೋಗ್ಯ ಮೂಲಸೌಕರ್ಯವನ್ನು ತುರ್ತಾಗಿ ಬಲಪಡಿಸುವುದು ಅತ್ಯಗತ್ಯ.
ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಸುಸಜ್ಜಿತ ಚಿಕಿತ್ಸಾ ವ್ಯವಸ್ಥೆ: ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಚಿಕಿತ್ಸೆಗೆ ಅಗತ್ಯವಿರುವ ಸೌಲಭ್ಯಗಳನ್ನು, ಉಪಕರಣಗಳನ್ನು (ಉದಾ: ಇಸಿಜಿ, ಎಕೋಕಾರ್ಡಿಯೋಗ್ರಾಮ್, ಡಿಫಿಬ್ರಿಲೇಟರ್ಗಳು) ಒದಗಿಸಬೇಕು.
ಸಿಬ್ಬಂದಿ ತರಬೇತಿ ಮತ್ತು ನೇಮಕಾತಿ: ವೈದ್ಯರು, ನರ್ಸ್ಗಳು ಮತ್ತು ಇತರ ವೈದ್ಯಕೀಯ ಸಿಬ್ಬಂದಿಗೆ ಹೃದಯ ಸಂಬಂಧಿ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ವಿಶೇಷ ತರಬೇತಿ ನೀಡಬೇಕು.
ಸರ್ಕಾರದಿಂದ ಕೈಗೊಳ್ಳಬೇಕಾದ ಹೆಚ್ಚುವರಿ ಕ್ರಮಗಳು:
ಸಂಪೂರ್ಣ ವೈದ್ಯಕೀಯ ತಪಾಸಣೆ ಯೋಜನೆ: ರಾಜ್ಯ ಸರ್ಕಾರವು 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ವಾರ್ಷಿಕ ಹೃದಯ ತಪಾಸಣೆಯನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಬೇಕು.
ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಬಲೀಕರಣ: ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೃದಯಾಘಾತದ ಪ್ರಾಥಮಿಕ ಚಿಕಿತ್ಸೆ ಮತ್ತು ಸಲಹೆ ನೀಡಲು ಸಿಬ್ಬಂದಿಗೆ ತರಬೇತಿ ನೀಡಬೇಕು.
ಆರೋಗ್ಯಕರ ಆಹಾರ ಪದ್ದತಿ: ರಾಜ್ಯದಲ್ಲಿ ಆರೋಗ್ಯಕರ ಆಹಾರ ಪದ್ಧತಿಗಳನ್ನು ಉತ್ತೇಜಿಸಲು ಮತ್ತು ಕಲಬೆರಕೆ ತಡೆಯಲು ಕಠಿಣ ಕ್ರಮಗಳನ್ನು ಜಾರಿಗೊಳಿಸಬೇಕು.
ಸಂಶೋಧನೆ ಮತ್ತು ಅಭಿವೃದ್ಧಿ: ರಾಜ್ಯದಲ್ಲಿ ಹೃದಯ ಆರೋಗ್ಯ ಚಿಕಿತ್ಸಾ ಹಾಗೂ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿ, ಸ್ಥಳೀಯ ಮಟ್ಟದಲ್ಲಿ ರೋಗದ ಸ್ವರೂಪ ಮತ್ತು ಕಾರಣಗಳನ್ನು ಅಧ್ಯಯನ ಮಾಡಲು ಪ್ರೋತ್ಸಾಹಿಸಬೇಕು.
ಹೆಚ್ಚುತ್ತಿರುವ ಹೃದಯಘಾತ ಪ್ರಕರಣಗಳು ರಾಜ್ಯದ ನಾಗರಿಕರ ಆರೋಗ್ಯ ಮತ್ತು ಭವಿಷ್ಯದ ಮೇಲೆ ತೀವ್ರ ಸ್ವರೂಪದ ಆತಂಕವನ್ನು ಉಂಟುಮಾಡುತ್ತಿದೆ. ಆದ್ದರಿಂದ, ಈ ಕುರಿತು ತಾವು ವೈಯಕ್ತಿಕ ಗಮನಹರಿಸಿ, ಮೇಲೆ ತಿಳಿಸಿದ ಕ್ರಮಗಳನ್ನು ಆದ್ಯತೆಯ ಮೇಲೆ ಜಾರಿಗೆ ತರಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಶಾಸಕ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…