ಮೈಸೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಡೆಂಗ್ಯೂ ನಿಯಂತ್ರಣಕ್ಕೆ ಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಮಳೆಗಾಲ ಆಗಿರುವುದರಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕಮಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಡೆಂಗ್ಯೂ ಪೀಡಿತರ ಸಾವಿನ ಪ್ರಮಾಣ ಕಡಿಮೆಯಿದೆ. ಜನರು ಕೂಡ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಸೊಳ್ಳೆಗಳ ಮೂಲಕ ಡೆಂಗ್ಯೂ ಹರಡುತ್ತಿದೆ. ನೀರು ನಿಂತರೆ ಸೊಳ್ಳೆಗಳು ಹೆಚ್ಚಾಗುತ್ತವೆ. ಹಾಗಾಗಿ ಮನೆಗಳ ಮುಂದೆ ನೀರು ನಿಲ್ಲದಂತೆ ಜನರು ನೋಡಿಕೊಳ್ಳಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ನಿಗಾ ವಹಿಸಬೇಕು ಎಂದರು.