Mysore
23
few clouds

Social Media

ಸೋಮವಾರ, 26 ಜನವರಿ 2026
Light
Dark

ದೇವೇಗೌಡರ ಕುರಿತು ನಮಗಿರುವುದು ರಾಜಕೀಯ ವಿರೋಧ ಅಷ್ಟೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯಾತೀತ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ಸಿದ್ದರಾಮಯ್ಯರಿಗೆ ಗರ್ವ ಎನ್ನುತ್ತಿದ್ದಾರೆ ದೇವೇಗೌಡರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚಾಮರಾಜ ಕ್ಷೇತ್ರದಲ್ಲಿ ನಡೆದ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು, ಜೆಡಿಎಸ್‌ ವರಿಷ್ಠ ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳು ಜಾತ್ಯತೀತವಾಗಿಲ್ಲ. ಯಾವುದೇ ಕಾರಣಕ್ಕೂ ನಮ್ಮದು ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಡಿದ ಜೆಡಿಎಸ್, ನನ್ನನ್ನೂ(ಸಿದ್ದರಾಮಯ್ಯ) ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ ಎಂದರು.

ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಭುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಿ ಎಂದು ತಿಳಿಸಿದರು.

ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ ಅಭಿವೃದ್ಧಿ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಿ ಎಂದು ಪ್ರಶ್ನಿಸಿದರು.

ಬರೀ ಶ್ರೀಮಂತರು ಹೊಟ್ಟೆ ತುಂಬಿಸಿಕೊಂಡು ಮಲಗೋದಲ್ಲ. ಬಡವರೂ ರಾತ್ರಿ ಹೊಟ್ಟೆತುಂಬ ಊಟ ಮಾಡಿ ಮಲಗಬೇಕು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದೆವು. ನಮ್ಮ ಭಾಗ್ಯಗಳೆಲ್ಲಾ ಬಡವರ ಬದುಕಿಗೆ ಆಸರೆಯಾದವು ಎಂದರು.

Tags:
error: Content is protected !!