ನಂಜನಗೂಡು: ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಇಂದು ಬೆಳಿಗ್ಗೆಯಿಂದಲೇ ಉಪಾಹಾರವನ್ನು ಸೇವಿಸದೇ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ಮೆನು ಚಾರ್ಟ್ ಪ್ರಕಾರ ಊಟ ನೀಡುತ್ತಿಲ್ಲ. ಸ್ವಚ್ಛತೆಯಂತೂ ಇಲ್ಲವೇ ಇಲ್ಲ. ನಮಗೆಲ್ಲಾ ಹಳಸಿದ ಅನ್ನ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಊಟವನ್ನೇ ಸರಿಯಾಗಿ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಪೋಷಕರು ಕೂಡ ವಿದ್ಯಾರ್ಥಿಗಳಿಗೆ ಸಾಥ್ ನೀಡಿದ್ದು, ಪ್ರಾಂಶುಪಾಲೆ ವಸಂತ ಕುಮಾರಿ, ನಿಲಯ ಪಾಲಕ ಮಹದೇವಪ್ಪ, ಅತಿಥಿ ಶಿಕ್ಷಕ ಗುರುಸ್ವಾಮಿ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಮಾನತುಪಡಿಸುವ ತನಕ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಇನ್ನು ಈ ವಸತಿ ಶಾಲೆಯಲ್ಲಿ 6ನೇ ತರಗತಿಯಿಂದ ದ್ವಿತೀಯ ಪಿಯುಸಿ ತನಕ ಒಟ್ಟು 580 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಇಲ್ಲಿ ಮೂಲಭೂತ ಸೌಕರ್ಯ ಮರೀಚಿಕೆಯಾಗಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಇಂದು ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದಾರೆ.





