Mysore
17
clear sky

Social Media

ಗುರುವಾರ, 22 ಜನವರಿ 2026
Light
Dark

ಡ್ರಗ್ಸ್‌ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು : ಮಕ್ಕಳಲ್ಲಿ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳ ಸೇವನೆ ತಡೆಗಟ್ಟಲು ಹಲವಾರು ಕ್ರಮ ಕೈಗೊಳ್ಳಲಾಗುತ್ತಿದ್ದು, ಅದಕ್ಕೂ ಮೊದಲು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳ ಗ್ರಾಮ ಸಭೆಯಲ್ಲಿ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀ ಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾರ್ಕೋ ಸಮನ್ವಯ ಕೇಂದ್ರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡ್ರಗ್ಸ್ ಬಳಕೆ ಮಾಡುವುದರಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಮೂಲಕ ಬೇಡಿಕೆ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಿದರೆ ಬಳಕೆಯನ್ನು ನಿಲ್ಲಿಸಬಹುದು ಎಂದು ತಿಳಿಸಿದರು.

ಡ್ರಗ್ಸ್ ಬಳಕೆ ನಿಷೇಧ ಮಾಡುವುದು ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿ ಅಲ್ಲ. ಎಲ್ಲಾ ಇಲಾಖೆಗಳ ಜವಾಬ್ದಾರಿಯೂ ಹೌದು. ಈ ಕುರಿತು ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾತನಾಡಿ, ಡ್ರಗ್ಸ್ ಬಳಕೆ ಬಗ್ಗೆ ದೂರು ನೀಡಲು ವೆಬ್ ಸೈಟ್ ಇದ್ದು ಅದರ ಮೂಲಕ ದೂರು ನೀಡಬಹುದು. ಮಾಹಿತಿ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು. ಡ್ರಗ್ಸ್ ಬಳಕೆ ನಿಷೇಧ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸುವುದರಿಂದ ಅರಿವು ಮೂಡಿಸಲು ಸಾಧ್ಯವಾಗುತ್ತದೆ. ಈ ಸಂಬಂಧ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಜೂನ್ 26 ರಂದು ಪ್ರತಿಜ್ಞಾ ವಿಧಿ ಬೋಧಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ ಶಾಲಾ ಮಕ್ಕಳಿಗೆ ಅರಿವು ಮೂಡಿಸಲಾಗುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಡಿಸಿಪಿ ಸುಂದರ ರಾಜ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!