ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಮೈಸೂರು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ನಾಮಫಲಕಕ್ಕೆ ಕಲ್ಲು ಎತ್ತಿ ಹಾಕಿ ಒಡೆದು ಹಾಕಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗ್ರಾಮದಲ್ಲಿ ಹಾಕಿದ್ದ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ನಾಮಫಲಕ ಇದಾಗಿದ್ದು, ಘಟನೆ ನಡೆಯುತ್ತಿದ್ದಂತೆ ಕಿಡಿಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಶಾಸಕ ಜಿ.ಟಿ.ದೇವೇಗೌಡ ಅವರು, ಘಟನೆ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಸ್ಥಳದಲ್ಲೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಸ್ಥಳಕ್ಕೆ ಬರುವಂತೆ ಸೂಚನೆ ನೀಡಿದರು. ದುಷ್ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಆದಷ್ಟು ಬೇಗ ಪತ್ತೆಹಚ್ಚಿ ಬಂಧಿಸುವಂತೆ ಜಿ.ಟಿ.ದೇವೇಗೌಡ ಆಗ್ರಹಿಸಿದರು.