ಎಚ್.ಡಿ.ಕೋಟೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯ ರಸ್ತೆಯ ಕೋಡಿ ಅರಳಿ ಗ್ರಾಮದ ಬಳಿ ನಡೆದಿದೆ.
ತಾಲ್ಲೂಕಿನ ಹೊಳೆಹುಂಡಿ ಗ್ರಾಮದ ರಾಜು (೪೦) ಮೃತಪಟ್ಟ ಬೈಕ್ ಸವಾರ.
ರಾಜು ತಮ್ಮ ಜಮೀನಿನಲ್ಲಿ ಕೆಲಸ ಮುಗಿಸಿ ಹೊಳೆಹುಂಡಿ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಮೈಸೂರು- ಮಾನಂದವಾಡಿ ಮುಖ್ಯ ರಸ್ತೆಯ ಕೋಡಳ್ಳಿ ಮರ ಬಳಿ ಎಚ್.ಡಿ.ಕೋಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ತಲೆಗೆ ತೀವ್ರ ಗಾಯವಾಗಿ ರಕ್ತಸ್ರಾವವಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.
ನಂತರ ಸ್ಥಳಕ್ಕೆ ಎಚ್.ಡಿ.ಕೋಟೆ ಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸಿದ ನಂತರ ಮೃತ ದೇಹವನ್ನು ಎಚ್.ಡಿ.ಕೋಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿ, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಒಪ್ಪಿಸಲಾಯಿತು.
ವಿಚಾರ ತಿಳಿಯುತ್ತಿದ್ದಂತೆ ಶಾಸಕ ಅನಿಲ್ ಚಿಕ್ಕಮಾದು ಮೃತ ವ್ಯಕ್ತಿಯ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಧನಸಹಾಯ ಮಾಡಿದರು.
ಮೃತರಿಗೆ ಪತ್ನಿ, ಪುತ್ರ, ಓರ್ವ ಪುತ್ರಿ ಇದ್ದಾರೆ. ಈ ಸಂಬಂಧ ಎಚ್.ಡಿ.ಕೋಟೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





